ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು.
ಸಭೆಯಲ್ಲಿ ಗ್ರಾಮಸ್ಥರು ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ವೈದ್ಯರು ನಿಯಮಿತವಾಗಿ ಹಾಜರಿದ್ದು ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡಬೇಕು ಎಂದು ಆಗ್ರಹಿಸಿದರು. ತುರ್ತು ಸೇವೆಗಳ ದೃಷ್ಟಿಯಿಂದ ಆಸ್ಪತ್ರೆ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದು ತಿಳಿಸಿದರು. ಜೊತೆಗೆ, ಆಸ್ಪತ್ರೆಗೆ ಸಂಬಂಧಿಸಿದ ಜಾಗವನ್ನು ಇಲಾಖೆಗೆ ಅಧಿಕೃತವಾಗಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಶೀಘ್ರಗೊಳಿಸಬೇಕೆಂದು ಒತ್ತಾಯಿಸಿದರು.
ಇದೇ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕುರಿತು ಕೂಡ ಸಾರ್ವಜನಿಕರು ದೂರುಗಳನ್ನು ಸಲ್ಲಿಸಿದರು. ಪಡಿತರ ಚೀಟಿಗಳ ತಾಂತ್ರಿಕ ದೋಷಗಳಿಂದ ಬಡವರು ಆಹಾರ ಧಾನ್ಯ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ಕಂದಾಯ ಇಲಾಖೆಗೆ ಸಂಬಂಧಿಸಿದ ಭೂ ದಾಖಲೆ ತಿದ್ದುಪಡಿ ಮತ್ತು ಪೌತಿ ಖಾತೆ ಸಮಸ್ಯೆಗಳ ಬಗ್ಗೆ ಕೂಡ ಮನವಿ ಮಾಡಿದರು.
ಸಭೆಯ ವೇಳೆ ವೃದ್ಧೆಯೊಬ್ಬರ ಸಮಸ್ಯೆಯನ್ನು ಗಮನಿಸಿದ ಜಿಲ್ಲಾಧಿಕಾರಿಗಳು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಸಾರ್ವಜನಿಕರು ನೀಡಿದ ಪ್ರತಿಯೊಂದು ಮನವಿಯನ್ನು ಪರಿಶೀಲಿಸಿ, ಕಾನೂನು ಚೌಕಟ್ಟಿನೊಳಗೆ ಶೀಘ್ರ ಪರಿಹಾರ ಒದಗಿಸಲಾಗುವುದು,” ಎಂದು ಭರವಸೆ ನೀಡಿದರು.
ಒಟ್ಟಿನಲ್ಲಿ, ಜನಸಂಪರ್ಕ ಸಭೆಯ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿದ ಜಿಲ್ಲಾಧಿಕಾರಿಗಳ ಈ ಕ್ರಮಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಶಾಭಾವನೆ ವ್ಯಕ್ತಪಡಿಸಿದರು.
ವರದಿ : ಲಾವಣ್ಯ ಅನಿಗೋಳ




