ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ.
ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ ಈ ದಾರುಣ ಘಟನೆ ಬೆಳಕಿಗೆ ಬಂದಿದೆ. ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಲಾಗಿದ್ದು, ಕಾರಿನೊಳಗಿದ್ದ ರಾಜು ಬೋಳಶೆಟ್ಟಿ ಅವರ ದೇಹ ಸಂಪೂರ್ಣ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ. ಶವವು ಗುರುತು ಸಿಗದಷ್ಟು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ದುಷ್ಕರ್ಮಿಗಳು ಪೂರ್ವನಿಯೋಜಿತವಾಗಿ ಈ ಕೃತ್ಯ ಎಸಗಿ, ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಘಟನೆ ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ವರದಿ : ಲಾವಣ್ಯ ಅನಿಗೋಳ




