Political News: ಬುಧವಾರ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದ ಪರಿಣಾಮ, ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಬಂಧಪಟ್ಟ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸ್ ಜಾರಿ ಮಾಡಬೇಕು ಎಂದು ಸಿಎಂ ಆದೇಶಿಸಿದ್ದಾರೆ.
ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದನ್ನು ಆಸ್ಪತ್ರೆ ಮುಖ್ಯಸ್ಥರು ಏಕೆ ಗಮನಿಸಿಲ್ಲ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪದಂತೆ ಕಾಣುತ್ತಿದ್ದು, ಈ ಸಂಬಂಧ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಬೇಕು. ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು. ನಿನ್ನೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ಇದೇ ವೇಳೆ ಹೇಳಿದ್ದಾರೆ.
ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಈಗಲೇ ಕತ್ತರಿಸಬೇಕು. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಬೇಕು. ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ನೀರು ನಿಂತ ಅಂಡರ್ ಪಾಸ್‌ಗಳನ್ನು ಜನ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.




