ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್‌ಪೆಕ್ಟರ್ ಸಸ್ಪೆಂಡ್ !

ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್ ತಹಶೀಲ್ದಾರರನ್ನು ಸಸ್ಪೆಂಡ್ ಮಾಡಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕ್ರಮವು, ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ಆರೋಪಗಳು ಕೇಳಿಬಂದ ಹಿನ್ನೆಲೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಕಾರಣವಾಗಿತ್ತು. ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅವರು ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಒಂದೆರಡು ದಿನಗಳಲ್ಲಿ ಕಮೀಷನರ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿಯುವುದಾಗಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಈ ಸಸ್ಪೆನ್ಷನ್ ಆದೇಶ ಹೊರಬಿದ್ದಿರುವುದು ಗಮನಾರ್ಹವಾಗಿದೆ. ಇದಕ್ಕೂ ಮೊದಲು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿತ್ತು. ಇದೀಗ ಇನ್ಸ್‌ಪೆಕ್ಟರ್ ಮಟ್ಟದ ಅಧಿಕಾರಿಯ ಮೇಲೂ ಕ್ರಮ ಕೈಗೊಳ್ಳಲಾಗಿದೆ.

ಒಬ್ಬ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ಇದೀಗ ಪೊಲೀಸ್ ಇಲಾಖೆಯೊಳಗೆ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಮಗಳು ಸಾಧ್ಯವಿದೆಯೇ ಎಂಬ ಪ್ರಶ್ನೆ ಎದ್ದಿದೆ. ಪ್ರಕರಣದ ತನಿಖೆ ಇನ್ನಷ್ಟು ತೀವ್ರಗೊಳ್ಳುವ ನಿರೀಕ್ಷೆ ಇದೆ.

About The Author