ಬೀದರ್ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಮುಂದಾದ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ವಿಶ್ವನಾಥ ಮತ್ತು ಲೋಕೇಶ್, ನಿಯಮಬಾಹಿರವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ತಡೆದು ತಪಾಸಣೆ ನಡೆಸುತ್ತಿದ್ದ ವೇಳೆ ಸ್ಥಳದಲ್ಲೇ ಗಲಾಟೆ ಉಂಟಾಗಿದೆ.
ಈ ವೇಳೆ ಲಾರಿ ಮಾಲೀಕ ಚಂದರ್ ಎಂಬಾತ, ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಸರ್ಕಾರಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆಯೇ ಕೈ ಹಾಕಿದ ಈ ಘಟನೆ, ಮರಳು ಮಾಫಿಯಾದ ದೌರ್ಜನ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.
ಘಟನೆಯ ಬಳಿಕ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿ ಚಂದರ್ ಅನ್ನು ಬಂಧಿಸಿದ್ದಾರೆ. ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಈ ಘಟನೆ ಬಳಿಕ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಕ್ರಮ ಮರಳು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
ಒಟ್ಟಾರೆ, ಅಧಿಕಾರಿಗಳ ಮೇಲೆಯೇ ದಾಳಿ ನಡೆಸುವ ಮಟ್ಟಕ್ಕೆ ಹೋಗಿರುವ ಮರಳು ಮಾಫಿಯಾ, ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುತ್ತಿರುವುದು ಸ್ಪಷ್ಟವಾಗಿದೆ. ಈ ಘಟನೆ ಬಳಿಕ ಅಧಿಕಾರಿಗಳು ಎಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.




