ಬಾಲಕಾರ್ಮಿಕ ಪದ್ಧತಿಗೆ ಮಂಡ್ಯ ಡಿಸಿ ಬ್ರೇಕ್!

ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 2025ರ ಏಪ್ರಿಲ್‌ನಿಂದ 2026ರ ಮಾರ್ಚ್‌ವರೆಗೆ ಒಟ್ಟು 951 ತಪಾಸಣೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಗ್ಯಾರೇಜ್, ಹೋಟೆಲ್ ಮತ್ತು ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿದ್ದ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಗುರುತಿಸಿ, ಪತ್ತೆಯಾದ ಪ್ರಕರಣಗಳಲ್ಲಿ 14 ಎಫ್‌ಐಆರ್ ದಾಖಲಾಗಿದ್ದು, ಉಳಿದ 26 ಪ್ರಕರಣಗಳು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ. ಇಂತಹ ಅಕ್ರಮಗಳಲ್ಲಿ ತೊಡಗಿರುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸುವುದನ್ನು ಸಂಪೂರ್ಣ ತಡೆಯಲು ತಾಲೂಕು ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ವಿಸ್ತರಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಮಕ್ಕಳಿಗೆ ಕಡ್ಡಾಯ ಶಿಕ್ಷಣ, ಸಲಹೆ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಒದಗಿಸುವತ್ತ ಹೆಚ್ಚಿನ ಒತ್ತು ನೀಡಬೇಕು ಎಂದಿದ್ದಾರೆ. 2025-26ರ ಅವಧಿಯಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕ ಮತ್ತು ಬಾಲ್ಯವಿವಾಹ ನಿರ್ಮೂಲನೆಗಾಗಿ 9 ಬೀದಿ ನಾಟಕಗಳು, 7,000 ಪಾಂಪ್ಲೆಟ್‌ಗಳ ವಿತರಣೆ, 22 ಗೋಡೆ ಬರಹಗಳು ಹಾಗೂ 6 ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸುವುದು ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಪ್ರಕಾರ ಗಂಭೀರ ಅಪರಾಧವಾಗಿದೆ. ಈ ಕಾಯ್ದೆಯಡಿ ತಪ್ಪಿತಸ್ಥರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 20 ಸಾವಿರದಿಂದ 50 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.

About The Author