Bhatkal News: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ಮೃತಪಟ್ಟಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಇನ್ನು ಕೆಲವರನ್ನು ರಕ್ಷಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ಇಬ್ಬರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗಿದೆ.
ಕಪ್ಪೆಚಿಪ್ಪು ತೆಗೆಯಲು 14 ಜನ ನದಿಗೆ ಇಳಿದಿದ್ದರು. ಇದರಲ್ಲಿ 8 ಜನ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದರೆ, ಇಬ್ಬರು ನಾಪತ್ತೆಯಾಗಿದ್ದಾರೆ. ಸಾವನ್ನಪ್ಪಿದವರಲ್ಲಿ ಓರ್ವ ಪುರುಷ 7 ಮಹಿಳೆಯರು ಎನ್ನಲಾಾಗಿದೆ. 4 ಜನರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ 1 ಕುಟುಂಬದವರಾಾಗಿದ್ದು, ಶಿರಾಲಿ ಮೂಲದವರಾಗಿದ್ದಾರೆ.
ಲಕ್ಷ್ಮೀ ಮಾದೇವ್ ನಾಯ್ಕ್(38), ಲಕ್ಷ್ಮೀ ಶಿವರಾಮ್ ನಾಯ್ಕ್(39), ಮಾಲತಿ ಜಟ್ಟಪ್ಪ ನಾಯ್ಕ್ (38), ಮಾಸ್ತಮ್ಮ ಮಂಜುನಾಥ್ ನಾಯ್ಕ್ (43), ಲಕ್ಷ್ಮೀ ನಾಯಕ್, ಲಕ್ಷ್ಮೀ ಅಣ್ಣಪ್ಪ ನಾಯ್ಕ್ (44), ಜ್ಯೋತಿ ನಾಯ್ಕ್ (37), ಉಮೇಶ್ ಮಂಜುನಾಥ್ ನಾಯ್ಕ್ (42), ಮೃತ ದುರ್ದೈವಿಗಳಾಗಿದ್ದಾರೆ.
ಇನ್ನು ಸಿಎಂ ಸಿದ್ದರಾಾಮಯ್ಯ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




