Hubli News: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳು ಹಾಳಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯ ತಬೀಬ್ ಲ್ಯಾಂಡ್ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ಇಂದು ರೈತರ ಆಕ್ರೋಶ ಭುಗಿಲೆದ್ದಿತ್ತು. ಎತ್ತಿನ ಬಂಡಿಗಳು, ಟ್ರ್ಯಾಕ್ಟರ್ಗಳು ಹಾಗೂ ವಾಹನಗಳ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ರೈತರು ಹೆಸ್ಕಾಂ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. “ಸಮರ್ಪಕ ವಿದ್ಯುತ್ಗಾಗಿ ನಮ್ಮ ಹೋರಾಟ, ರೈತರ ಹಕ್ಕಿಗಾಗಿ ಒಗ್ಗಟ್ಟಿನ ಆರ್ಭಟ” ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಪ್ರತಿಭಟನೆ ಗಮನ ಸೆಳೆಯಿತು.
ಮಾವನೂರ, ಗಿರಿಯಾಲ, ಕಟ್ನೂರ, ಇನಾಂ ವೀರಾಪುರ, ಕರಡಿಕೊಪ್ಪ, ಬೆಳಗಲಿ, ಬೊಮ್ಮಸಮುದ್ರ ಸೇರಿದಂತೆ ಹತ್ತಾರು ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ವಿದ್ಯುತ್ ಪೂರೈಕೆ ಆಗದ ಕಾರಣ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆಳೆಗಳು ಒಣಗಿ ಹೋಗುತ್ತಿವೆ ಎಂದು ರೈತರು ಅಳಲು ತೋಡಿಕೊಂಡರು.
ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆ ಬೆಳೆದಿದ್ದೇವೆ. ಆದರೆ ಸಮರ್ಪಕ ವಿದ್ಯುತ್ ಇಲ್ಲದ ಕಾರಣ ಬೆಳೆಗಳು ಹಾಳಾಗುತ್ತಿವೆ. ಈ ಬಗ್ಗೆ ಹಲವು ಬಾರಿ ಹೆಸ್ಕಾಂ ಅಧಿಕಾರಿಗಳು ಹಾಗೂ ಸರ್ಕಾರದ ಗಮನಕ್ಕೆ ತಂದಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಸಮಸ್ಯೆಯನ್ನು ತಕ್ಷಣ ಬಗೆಹರಿಸಿ ಕೃಷಿ ಚಟುವಟಿಕೆಗಳಿಗೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
“ಒಟ್ಟಾರೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದು, ರೈತರ ಬೇಡಿಕೆಗೆ ಅಧಿಕಾರಿಗಳು ಯಾವ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಕ್ಯಾಮೆರಾ ಪರ್ಸನ್ ಹೇಮಂತ್ ಜೊತೆ ಸಂಗಮೇಶ ಸತ್ತಿಗೇರಿ ಕರ್ನಾಟಕ ಟಿವಿ, ಹುಬ್ಬಳ್ಳಿ




