Hubli News: ಹುಬ್ಬಳ್ಳಿಯ ಕೃಷ್ಣಾಪುರ ಪ್ರದೇಶದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದ ಅತಿಕ್ರಮಣ ತೆರವುಗೊಳಿಸಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕೃಷ್ಣಾಪುರ ಭಾಗದಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕ್ರೀಡಾಂಗಣಕ್ಕಾಗಿ ಸುಮಾರು 15 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಸ್ಥಳೀಯರು ಹಾಗೂ ಸಂಘಟನೆಗಳ ಮುಖಂಡರು ಇಂದು ಮಹಾನಗರ ಪಾಲಿಕೆ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಹಿಂದೆ ಪಾಳು ಬಿದ್ದಿದ್ದ ಪ್ರದೇಶವನ್ನು ಕ್ರೀಡಾಂಗಣವಾಗಿ ಅಭಿವೃದ್ಧಿಪಡಿಸುವಂತೆ ಮನವಿ ಮಾಡಲಾಗಿತ್ತು. ಬಳಿಕ ಮಹಾನಗರ ಪಾಲಿಕೆ ಸರ್ವೆ ನಡೆಸಿದ ವೇಳೆ ಕ್ರೀಡಾಂಗಣದ ಸುಮಾರು 1 ಎಕರೆ 11 ಗುಂಟೆ ಜಾಗ ಅತಿಕ್ರಮಣಗೊಂಡಿರುವುದು ಬೆಳಕಿಗೆ ಬಂದಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಅತಿಕ್ರಮಣ ತೆರವುಗೊಳಿಸುವ ಸಂಬಂಧ ನ್ಯಾಯಾಲಯದ ಮೊರೆ ಹೋಗಲಾಗಿದ್ದು, ಪ್ರಕರಣದಲ್ಲಿ ಅತಿಕ್ರಮಣಕಾರರ ವಿರುದ್ಧ ತೀರ್ಪು ಬಂದಿದ್ದರೂ ಸಹ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡಿಲ್ಲ ಎಂದು ದೂರಿದರು. ಸಣ್ಣಪುಟ್ಟ ಅತಿಕ್ರಮಣಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವ ಅಧಿಕಾರಿಗಳು, ಈ ಪ್ರಕರಣದಲ್ಲಿ ಮಾತ್ರ ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಾಲಿಕೆ ಆಯುಕ್ತರು ಭೇಟಿಗೆ ಸಮಯ ನೀಡಿದ್ದರೂ ಕಚೇರಿಗೆ ಬಾರದೇ ನಿರ್ಲಕ್ಷ್ಯ ತೋರಿದ್ದಾರೆ. ಹಲವು ವರ್ಷಗಳಿಂದ ಮನವಿ, ಪ್ರತಿಭಟನೆ ಮತ್ತು ಹೋರಾಟ ನಡೆಸುತ್ತಿದ್ದರೂ ಸಮಸ್ಯೆ ಬಗೆಹರಿಯದ ಕಾರಣ ಕಚೇರಿಯಲ್ಲೇ ಧರಣಿ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಅಂಬೇಡ್ಕರ್ ಕ್ರೀಡಾಂಗಣದ ಸುಮಾರು 1 ಎಕರೆ 11 ಗುಂಟೆ ಅತಿಕ್ರಮಿತ ಜಾಗವನ್ನು ತಕ್ಷಣ ತೆರವುಗೊಳಿಸಿ ಕ್ರೀಡಾಂಗಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದ ಆದೇಶವಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದು, ಕೆಲ ಪ್ರಭಾವಿಗಳ ಒತ್ತಡದಿಂದ ಕ್ರಮ ವಿಳಂಬವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಮಸ್ಯೆ ಬಗೆಹರಿಯುವವರೆಗೆ ಹೋರಾಟ ಮುಂದುವರಿಯಲಿದ್ದು, ಅಗತ್ಯವಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಿ ಸರ್ಕಾರದ ಮಟ್ಟದಲ್ಲಿಯೂ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.




