Dharwad News: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಧಾರವಾಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯಾದ್ಯಂತ ರೌಡಿಶೀಟರ್‌ಗಳ ಮೇಲೆ ನಿಗಾ ಇಟ್ಟು, ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿಯೂ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಮಾರ್ಗದರ್ಶನದಲ್ಲಿ ಧಾರವಾಡ ತಾಲೂಕಿನ ಗರಗ, ಅಣ್ಣಿಗೇರಿ ಪಟ್ಟಣ, ನವಲಗುಂದ ಪಟ್ಟಣ, ಕಲಘಟಗಿ ಪಟ್ಟಣ ಹಾಗೂ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿದ ಪೊಲೀಸರು ತಲಾಷ್ ನಡೆಸಿದರು.
ಈ ವೇಳೆ ಅವರ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಖಡಕ್ ಎಚ್ಚರಿಕೆ ನೀಡಿದರು. ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.




