Dharwad: ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು

Dharwad News: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳಾ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 12ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ನವಲಗುಂದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳಾ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆಕೆಯಿಂದ 4 ಲಕ್ಷ 20 ಸಾವಿರ 690 ರೂಪಾಯಿ ಮೌಲ್ಯದ 42.29 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಕಳ್ಳತನ ನಡೆದ ಕುರಿತು ಪ್ರಕರಣ ದಾಖಲಾಗುತ್ತಿದ್ದಂತೆಯೇ ನವಲಗುಂದ ವೃತ್ತದ ಸಿಪಿಐ ರವಿಕುಮಾರ ಕಪ್ಪತನವರ ಅವರ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿತ್ತು. ನವಲಗುಂದ ಪೊಲೀಸ್ ಠಾಣೆಯ ಪಿಎಸ್‌ಐ ಜನಾರ್ಧನ ಬಿ. ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿತ್ತು.

ತನಿಖೆ ವೇಳೆ ದೊರೆತ ಸುಳಿವಿನ ಆಧಾರದ ಮೇಲೆ ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಕೃತ್ಯ ಎಸಗಿರುವುದಾಗಿ ಆರೋಪಿತೆ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ. ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಗುಂಜನ್ ಆರ್ಯ ಶ್ಲಾಘಿಸಿ ಅಭಿನಂದಿಸಿದ್ದಾರೆ.

About The Author