Political News: ಸಂತೋಷ್ ಲಾಡ್, ಸಲೀಂ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಒತ್ತಾಯ

Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆಯೇ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಮುಂದುವರಿದಿವೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ರಾಜ್ಯ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಗೆ ಸಮರ್ಪಕ ಪ್ರಾತಿನಿಧ್ಯ ನೀಡಬೇಕು ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಆಗ್ರಹಿಸಿ ಕುಂದಗೋಳ ಪಟ್ಟಣದ ಗಾಳಿಮರೆಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗಾಳಿಮರೆಮ್ಮ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಕೈಯಲ್ಲಿ ಸಂತೋಷ್ ಲಾಡ್ ಹಾಗೂ ಸಲೀಂ ಅಹ್ಮದ್ ಅವರ ಭಾವಚಿತ್ರಗಳನ್ನು ಹಿಡಿದು ಘೋಷಣೆ ಕೂಗಿದ ಅಭಿಮಾನಿಗಳು, ಪಕ್ಷ ಸಂಘಟನೆ ಹಾಗೂ ಜನಸೇವೆಯಲ್ಲಿ ಇಬ್ಬರೂ ನಾಯಕರ ಕೊಡುಗೆ ಮಹತ್ವದ್ದಾಗಿದ್ದು ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹಾಗೂ ಜಿಲ್ಲೆಯ ಜನರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇಬ್ಬರು ನಾಯಕರಿಗೂ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ಸಚಿವ ಸ್ಥಾನ ನೀಡುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನೂ ಪ್ರತಿಭಟನಾಕಾರರು ನೀಡಿದರು.

About The Author