Hubli News: ಚೆನ್ನಮ್ಮ ವೃತ್ತ ಫ್ಲೈಓವರ್ ವಿಳಂಬ; ಗುಂಡಿಗಳಿಂದ ಜನ ಹೈರಾಣ

Hubli News: ಹುಬ್ಬಳ್ಳಿಯ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆರಂಭವಾಗಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ರಸ್ತೆ ಗುಂಡಿಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಸಂಚಾರ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಗೋಳು ಮಾತ್ರ ಹೆಚ್ಚುತ್ತಲೇ ಇದೆ.

ಮೂರು ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಕಾರಣ ಚೆನ್ನಮ್ಮ ವೃತ್ತದಲ್ಲಿ ಸಂಚಾರ ದುಸ್ತರವಾಗಿದೆ. ರಸ್ತೆಯುದ್ದಕ್ಕೂ ಮೊಣಕಾಲು ಮಟ್ಟದ ತಗ್ಗು-ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ಬಂದರೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ.

ಬೈಕ್ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದ್ದು, ಕಾರು ಹಾಗೂ ಇತರೆ ವಾಹನ ಚಾಲಕರು ಕೂಡ ಹರಸಾಹಸ ಪಡುತ್ತಿದ್ದಾರೆ. ರಸ್ತೆಯಲ್ಲಿ ಜಾರಿ ಬೀಳುವ ಘಟನೆಗಳು ಸಾಮಾನ್ಯವಾಗಿವೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದ್ದರೂ, ಕಾಮಗಾರಿ ವಿಳಂಬದಿಂದ ಚೆನ್ನಮ್ಮ ವೃತ್ತದ ಸೌಂದರ್ಯ ಮತ್ತು ಸಂಚಾರ ವ್ಯವಸ್ಥೆ ಎರಡೂ ಹದಗೆಟ್ಟಿವೆ.

ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳುವ ಲಕ್ಷಣ ಇನ್ನೂ ಕಾಣುತ್ತಿಲ್ಲ. ಕನಿಷ್ಠ ಕೆಳಭಾಗದ ರಸ್ತೆಗಳ ದುರಸ್ತಿ ಹಾಗೂ ಗುಂಡಿಗಳನ್ನು ಮುಚ್ಚುವ ಕೆಲಸವನ್ನಾದರೂ ತಕ್ಷಣ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಜನರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

About The Author