Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸಿಎಂ ಗ್ರೀನ್ ಸಿಗ್ನಲ್?

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕ ಸ್ಪಂದನೆ ನೀಡಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಬೇಕು ಎಂಬ ಬಹುದಿನಗಳ ಬೇಡಿಕೆ ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರರ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹೋರಾಟದ ಹಿನ್ನೆಲೆ ಹಾಗೂ ಬೇಡಿಕೆಯ ಮಹತ್ವವನ್ನು ವಿವರಿಸಿತು.

ಈ ವೇಳೆ ಮಹಾನಗರ ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದ ಬಳಿಕ, 2027ರ ಜನಗಣತಿ ಆಧಾರದ ಮೇಲೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ಜಾರಿಗೆ ತರುವ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಟಿಪ್ಪಣಿ ಬರೆದು ಕಳುಹಿಸಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅವರ ಈ ನಡೆಗೆ ಧಾರವಾಡ ಭಾಗದ ಜನರು ಹಾಗೂ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದು, ಬಹುಕಾಲದ ಬೇಡಿಕೆ ಈಡೇರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರಿಯ ನ್ಯಾಯವಾದಿ ಬಿ.ಡಿ. ಹಿರೇಮಠ ಅವರ ನೇತೃತ್ವದಲ್ಲಿ ನಡೆದ ನಿಯೋಗದಲ್ಲಿ ವೆಂಕಟೇಶ ಮಾಚಕನೂರ, ವಿಠ್ಠಲ ಕಮ್ಮಾರ, ಮಾಜಿ ಸಂಸದ ಐ.ಜಿ. ಸನ್ನದಿ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ, ರಾಜಶೇಖರ ಕಮತಿ, ದಾನಪ್ಪ ಕಬ್ಬೇರ, ಗುರುರಾಜ ಹುಣಸಿಮರದ, ವೀರಣ್ಣ ಶೆಟ್ಟರ, ಗೌರಮ್ಮ ಬಲೋಗಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಧಾರವಾಡ ನಗರದ ಸಮಗ್ರ ಅಭಿವೃದ್ಧಿ, ಆಡಳಿತಾತ್ಮಕ ಸುಗಮತೆ ಹಾಗೂ ಸ್ಥಳೀಯ ಸಮಸ್ಯೆಗಳಿಗೆ ತ್ವರಿತ ಪರಿಹಾರ ದೊರಕುವ ನಿಟ್ಟಿನಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆ ಅಗತ್ಯವಾಗಿದೆ ಎಂದು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

About The Author