Mundagod News: ಮುಂಡಗೋಡ: ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಧರ್ಮರಾಜ ಬೆಡಸಗಾಂವ್ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು, ಮುಂಡಗೋಡಿನ ಹೆಸ್ಕಾಂ ಕಚೇರಿಯಲ್ಲಿ ದಾಳಿ ನಡೆಸಿ ಎಇಇ ಅವರನ್ನು ವಶಕ್ಕೆ ಪಡೆದಿದ್ದಾರೆ.
ಮಾಹಿತಿಯ ಪ್ರಕಾರ, ಬಿಸಿಎಂ ವಸತಿ ನಿಲಯದ ವಿದ್ಯುತ್ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳ ಸಂಬಂಧ ಹಣದ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮುಂಗಡವಾಗಿ ₹65 ಸಾವಿರ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಎಇಇ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಎನ್ನಲಾಗಿದೆ.
ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ಘಟಕಗಳ ಅಧಿಕಾರಿಗಳ ಎರಡು ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಲೋಕಾಯುಕ್ತ ದಾಳಿಯ ಸುದ್ದಿ ಮುಂಡಗೋಡಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




