Hubli Political News: ಎಸ್‌ಐಆರ್‌ನಲ್ಲಿ ಅಕ್ರಮ ಆರೋಪ: ಸರ್ಕಾರದ ವಿರುದ್ಧ ಟೆಂಗಿನಕಾಯಿ ವಾಗ್ದಾಳಿ

Hubli Political News: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಕೆಲವೆಡೆ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಯ್ದ ಸಮುದಾಯದವರಿಗೆ ಮಾತ್ರ ಅರ್ಜಿಗಳನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ದೇಶದ ಐದು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕವೂ ಅದರಲ್ಲಿ ಒಂದಾಗಿದೆ. ಆದರೆ ರಾಮನಗರ ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಚುನಾವಣಾ ಆಯೋಗದ ಸೂಚನೆಯಂತೆ ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಪ್ರತಿಯೊಬ್ಬ ಮತದಾರರಿಗೂ ಅರ್ಜಿ ವಿತರಿಸಿ ಪರಿಷ್ಕರಣೆ ಮಾಡಬೇಕು. ಆದರೆ ಕೆಲವು ಕಡೆಗಳಲ್ಲಿ ಶಾದಿ ಮಹಲ್ ಸೇರಿದಂತೆ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಇದು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು.

ರಾಜ್ಯ ಸರ್ಕಾರ ಕೆಲವರ ಸೂಚನೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದು, ಒಂದು ಸಮುದಾಯದ ಓಟ್‌ ಬ್ಯಾಂಕ್‌ ಬಲಪಡಿಸುವ ಉದ್ದೇಶದಿಂದ ತುಷ್ಟೀಕರಣ ರಾಜಕೀಯ ಮಾಡುತ್ತಿದೆ ಎಂದು ಮಹೇಶ್ ಟೆಂಗಿನಕಾಯಿ ಟೀಕಿಸಿದರು.

About The Author