Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನದಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ನಡೆದ ಸಾಂಪ್ರದಾಯಿಕ ಹೋರಿ ಮೆರವಣಿಗೆ ವೇಳೆ ಹಿಂದೂ ಯುವಕರ ಮೇಲೆ ಪೂರ್ವನಿಯೋಜಿತವಾಗಿ ಹಲ್ಲೆ ನಡೆಸಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ. ಈ ಘಟನೆಯಲ್ಲಿ 7 ರಿಂದ 8 ಮಂದಿ ಹಿಂದೂ ಯುವಕರ ಮೇಲೆ ಏಕಾಏಕಿ ದಾಳಿ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹತ್ಯೆಗೆ ಯತ್ನಿಸುವ ರೀತಿಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ತಾಲೂಕಿನಲ್ಲಿ ಮೇಲಿಂದ ಮೇಲೆ ಹಿಂದೂಗಳು ಹಾಗೂ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಇಂತಹ ಘಟನೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಕಂಡು ಬರುತ್ತಿದೆ ಎಂದು ಸಂಘಟನೆ ಆರೋಪಿಸಿದೆ. ಪ್ರಕರಣದಲ್ಲಿ ಸುಮಾರು 20ಕ್ಕೂ ಹೆಚ್ಚು ಆರೋಪಿಗಳು ಭಾಗಿಯಾಗಿರುವ ಶಂಕೆ ಇದ್ದರೂ, ಇದುವರೆಗೆ ಕೇವಲ ಮೂವರು ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ. ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.
ನಿರಪರಾಧಿ ಹಿಂದೂ ಯುವಕರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು. ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು ಎಂದು ಮನವಿ ಮಾಡಲಾಗಿದೆ. ಈ ಸಂಬಂಧ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.




