Rain Alert: ಕರ್ನಾಟಕದಲ್ಲಿ ಮುಂಗಾರು ರೌದ್ರಾವತಾರ ಮುಂದಿನ 4 ದಿನ ಹೈ ಅಲರ್ಟ್

Rain Alert: ಜೂನ್ ತಿಂಗಳಿಡೀ ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಈಗ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಬಿರುಸು ಪಡೆದುಕೊಳ್ಳುತ್ತಿದ್ದು, ಜುಲೈ 4ರಿಂದ 7ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ ತಿಂಗಳಲ್ಲಿ ತೀವ್ರ ಮಳೆ ಕೊರತೆ ಎದುರಿಸಿದ್ದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಎರಡು ವಾರಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಜುಲೈ 6 ಮತ್ತು 7ರಂದು ಕರಾವಳಿ ಕರ್ನಾಟಕದ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 5ರಿಂದ 7ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಇದರ ಜೊತೆಗೆ, ಜುಲೈ 5ರಿಂದ 9ರವರೆಗೆ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಜೂನ್ ತಿಂಗಳ ಮಳೆ ಕೊರತೆಯಿಂದ ಆತಂಕದಲ್ಲಿದ್ದ ರೈತರಿಗೆ ಇದೀಗ ಮಳೆ ಮುನ್ಸೂಚನೆ ಹೊಸ ಆಶಾಕಿರಣ ಮೂಡಿಸಿದೆ. ಆದರೆ ಭಾರೀ ಮಳೆಯ ಎಚ್ಚರಿಕೆ ಇರುವ ಜಿಲ್ಲೆಗಳ ಜನರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

About The Author