Hubli News: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಆತಂಕದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ತಮ್ಮ ಸ್ವಂತ ವೆಚ್ಚದಲ್ಲಿ ಈ ಮಹತ್ವದ ಕಾರ್ಯ ಕೈಗೊಂಡಿದ್ದು, ಮೂರು ದಿನಗಳ ಕಾಲ ಮೋಡ ಬಿತ್ತನೆ ನಡೆಸಲು ಯೋಜನೆ ರೂಪಿಸಲಾಗಿದೆ.
ಮಳೆ ಕೊರತೆಯಿಂದ ಮುಂಗಾರು ಬೆಳೆಗಳು ಒಣಗುವ ಭೀತಿಯಲ್ಲಿರುವ ರೈತರಲ್ಲಿ ಹೊಸ ಆಶಾಭರವಸೆ ಮೂಡಿಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನಗಳಿಗೆ ಚಾಲನೆ ನೀಡಲಾಗಿದ್ದು, ಹಾವೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ತೇವಾಂಶಯುಕ್ತ ಮೋಡಗಳ ಮೇಲೆ ಮೋಡ ಬಿತ್ತನೆ ನಡೆಸಲಾಗುತ್ತಿದೆ. ಒಂದು ಗಂಟೆಯ ಕಾರ್ಯಾಚರಣೆಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ಮೂರು ದಿನಗಳ ಕಾಲ ಈ ಪ್ರಯೋಗ ನಡೆಯಲಿದೆ.
ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಹಾವೇರಿಯಲ್ಲಿ ಆರಂಭವಾಗಿರುವ ಮೋಡ ಬಿತ್ತನೆ ಯಶಸ್ವಿಯಾದರೆ, ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದರು. ಮಳೆಯ ಪರಿಸ್ಥಿತಿ ಹಾಗೂ ತೇವಾಂಶಯುಕ್ತ ಮೋಡಗಳ ಲಭ್ಯತೆಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ಎಚ್.ಕೆ. ಪಾಟೀಲ್ ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆ ತೀವ್ರವಾಗಿದ್ದು, ರೈತರ ಹಿತದೃಷ್ಟಿಯಿಂದ ಸರ್ಕಾರ ವಿಳಂಬ ಮಾಡದೆ ರಾಜ್ಯಾದ್ಯಂತ ಮೋಡ ಬಿತ್ತನೆ ಕಾರ್ಯಕ್ರಮ ಆರಂಭಿಸಬೇಕು ಎಂದು ಆಗ್ರಹಿಸಿದರು. ಅಧಿಕಾರಿಗಳ ವರದಿಗಿಂತ ವಿಜ್ಞಾನಿಗಳ ಸಲಹೆಗೆ ಆದ್ಯತೆ ನೀಡಿ ತ್ವರಿತ ನಿರ್ಧಾರ ಕೈಗೊಳ್ಳುವಂತೆ ಒತ್ತಾಯಿಸಿದರು.
ಶಾಸಕ ಪ್ರಕಾಶ್ ಕೋಳಿವಾಡ ಮಾತನಾಡಿ, ಮೋಡ ಬಿತ್ತನೆಗೆ ಬಳಸುವ ವಿಶೇಷ ವಿಮಾನ ಈ ತಿಂಗಳಿಡೀ ಹುಬ್ಬಳ್ಳಿಯಲ್ಲೇ ಇರಲಿದೆ. ತೇವಾಂಶಯುಕ್ತ ಮೋಡಗಳು ಕಂಡುಬಂದ ಕೂಡಲೇ ಕಾರ್ಯಾಚರಣೆ ನಡೆಸಲಾಗುವುದು. ರೈತರ ಹಿತಕ್ಕಾಗಿ ವೈಜ್ಞಾನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಇನ್ನೂ ಶಾಸಕ ಎನ್.ಎಚ್. ಕೋನರೆಡ್ಡಿ ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದರು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯ ಶಾಸಕರು ವೈಯಕ್ತಿಕವಾಗಿ ಈ ಕಾರ್ಯಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು. ರೈತರ ಹಿತವೇ ಮೊದಲ ಆದ್ಯತೆಯಾಗಿದ್ದು, ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ಕೃಷಿ ಕ್ಷೇತ್ರಕ್ಕೆ ತಕ್ಷಣ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಒಟ್ಟಾರೆ, ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಕೃತಕ ಮಳೆಯ ಮೂಲಕ ಆಸರೆಯಾಗುವ ನಿರೀಕ್ಷೆಯಲ್ಲಿ ಹಾವೇರಿಯಲ್ಲಿ ಆರಂಭವಾದ ಮೋಡ ಬಿತ್ತನೆ ಕಾರ್ಯ ಈಗ ರಾಜ್ಯದ ಗಮನ ಸೆಳೆದಿದೆ. ಈ ಪ್ರಯೋಗ ಯಶಸ್ವಿಯಾದರೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಇದೇ ಮಾದರಿಯ ಮೋಡ ಬಿತ್ತನೆ ಕಾರ್ಯಕ್ರಮ ವಿಸ್ತರಿಸುವ ಸಾಧ್ಯತೆ ಇದ್ದು, ಮಳೆಯ ನಿರೀಕ್ಷೆಯಲ್ಲಿರುವ ರೈತರ ಕಣ್ಣಲ್ಲಿ ಹೊಸ ಭರವಸೆ ಮೂಡಿದೆ.
ಕ್ಯಾಮೆರಾ ಪರ್ಸನ್ ಹೇಮಂತ್ ಜೊತೆ ಸಂಗಮೇಶ ಸತ್ತಿಗೇರಿ ಕರ್ನಾಟಕ ಟಿವಿ ಹುಬ್ಬಳ್ಳಿ




