Rain Alert: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಜುಲೈ 7 ಮತ್ತು 8ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯ ಪರಿಣಾಮ ಕೃಷ್ಣಾ ಹಾಗೂ ಉಪನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಎಂಟು ಕೆಳಹಂತದ ಸೇತುವೆಗಳು ಮುಳುಗಡೆಯಾಗಿದ್ದು, ಆಲಮಟ್ಟಿ ಅಣೆಕಟ್ಟೆಯ ಒಳಹರಿವು ಕೂಡ ಏರಿಕೆಯಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳ ಒಟ್ಟು 14 ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ. ಮಳೆಯ ಅಬ್ಬರದಿಂದ ಕೆಲವೆಡೆ ಅನಾಹುತಗಳೂ ಸಂಭವಿಸಿವೆ. ಆಗುಂಬೆ ಬಳಿ ಮಾಲತಿ ನದಿಯಲ್ಲಿ ವೃದ್ಧರೊಬ್ಬರು ಕೊಚ್ಚಿಹೋಗಿದ್ದು, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಉಡುಪಿಯ ವಾರಂಬಳ್ಳಿಯಲ್ಲಿ ಶಾಲೆಯ ಮೇಲ್ಛಾವಣಿಯ ಹೆಂಚು ಬಿದ್ದು ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿದ್ದಾಳೆ.
ದಕ್ಷಿಣ ಕನ್ನಡದಲ್ಲಿ ಗಂಟೆಗೆ 50–60 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರಿನ ಹಲವು ಬೆಟ್ಟಗಳಲ್ಲಿ ಟ್ರೆಕ್ಕಿಂಗ್‌ನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




