Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು (ಜುಲೈ 18) ನಿಧನರಾಗಿದ್ದಾರೆ. ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.

1954ರ ಮೇ 25ರಂದು ಹೆಚ್.ಡಿ. ದೇವೇಗೌಡರೊಂದಿಗೆ ವಿವಾಹವಾಗಿದ್ದ ಚೆನ್ನಮ್ಮ, ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಕುಟುಂಬದ ಬೆನ್ನೆಲುಬಾಗಿ ನಿಂತಿದ್ದರು. ಈ ದಂಪತಿಗೆ ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಹಾಸನ ಜಿಲ್ಲೆಯ ಮುತ್ತಿಗೆ ಹಿರೇಹಳ್ಳಿಯವರಾದ ಚೆನ್ನಮ್ಮ, ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಆದರ್ಶ ಗೃಹಿಣಿಯಾಗಿ ಗುರುತಿಸಿಕೊಂಡಿದ್ದರು. ಅಂದಿನ ಕಾಲದಲ್ಲೇ ಎಸ್‌ಎಸ್‌ಎಲ್‌ಸಿ ಶಿಕ್ಷಣ ಪೂರ್ಣಗೊಳಿಸಿದ್ದ ಅವರು, ಕುಟುಂಬದ ಹಿರಿಯ ಮಗಳಾಗಿ ತಮ್ಮ ಸಹೋದರ-ಸಹೋದರಿಯರ ಜವಾಬ್ದಾರಿಯನ್ನೂ ಹೊತ್ತಿದ್ದರು.

2001ರಲ್ಲಿ ಹರದನಹಳ್ಳಿಯಲ್ಲಿ ದೇವಾಲಯದಿಂದ ಮರಳುವ ವೇಳೆ ಅವರ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದರೂ ಚಿಕಿತ್ಸೆ ಬಳಿಕ ಚೇತರಿಸಿಕೊಂಡು ಸಾಮಾನ್ಯ ಜೀವನಕ್ಕೆ ಮರಳಿದ್ದರು. ದೇವೇಗೌಡರ ರಾಜಕೀಯ ಪಯಣದಲ್ಲಿ ಸದಾ ಅವರ ಬೆನ್ನೆಲುಬಾಗಿ ನಿಂತಿದ್ದ ಚೆನ್ನಮ್ಮ, ಕುಟುಂಬದ ಎಲ್ಲ ಜವಾಬ್ದಾರಿಯನ್ನು ಹೊತ್ತು ಸಂಸಾರವನ್ನು ಯಶಸ್ವಿಯಾಗಿ ಮುನ್ನಡೆಸಿದ ಗಟ್ಟಿಗಿತ್ತಿಯಾಗಿ ಗುರುತಿಸಿಕೊಂಡಿದ್ದರು.

ಅವರ ನಿಧನಕ್ಕೆ ರಾಜಕೀಯ ಗಣ್ಯರು, ವಿವಿಧ ಪಕ್ಷಗಳ ನಾಯಕರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ.

About The Author