Koppala News: ಕೊಪ್ಪಳದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೃಹತ್ ಹೋರಾಟದಲ್ಲಿ ಕೊಪ್ಪಳದ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್ ಮತ್ತು ಪರಣ್ಣ ಮಳವಳ್ಳಿ ಹಾಗೂ ಹೇಮಲತಾ ನಾಯಕ್ ಅವರು ಬಿಜೆಪಿ ಧ್ವಜಗಳು, ಬಿತ್ತಿಪತ್ರಗಳನ್ನು ಹಿಡಿದು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಘೋಷಣೆ ಕೂಗಿದರು.
ಪ್ರತಿಭಟನಾಕಾರರು ಮುಖ್ಯ ರಸ್ತೆಯ ಮೂಲಕ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯತ್ತ ಮೆರವಣಿಗೆ ಸಾಗಿದರು. ರಾಜ್ಯ ಸರ್ಕಾರದ ರಾಜಕೀಯ ಧೋರಣೆಗಳನ್ನು ಹಾಗೂ ಕಾಂಗ್ರೆಸ್ ನಾಯಕರ ನಡವಳಿಕೆಯನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನಾ ಮೆರವಣಿಗೆ ಕಾಂಗ್ರೆಸ್ ಕಚೇರಿಯ ಸಮೀಪಕ್ಕೆ ಬರುತ್ತಿದ್ದಂತೆ, ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಗುಂಪನ್ನು ತಡೆಯಲು ಯತ್ನಿಸಿದರು. ಆದರೆ ಆಕ್ರೋಶಗೊಂಡ ಪ್ರತಿಭಟನಾಕಾರರು ಬ್ಯಾರಿಕೇಡ್ಗಳನ್ನು ನೂಕಿಕೊಂಡು, ಕಚೇರಿಯ ಪ್ರವೇಶ ದ್ವಾರ ಹಾಗೂ ಗೇಟ್ಗಳನ್ನು ಏರಿ ರಾಹುಲ್ ಗಾಂಧಿಯ ರಾಜಕೀಯ ಧೋರಣೆ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕೆಲ ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಯ ಮುಂಭಾಗಕ್ಕೆ ಕಲ್ಲು ತೂರಿ ಗಾಜಿನ ಕಿಟಕಿಗಳ ಮೇಲೆ ದಾಳಿ ನಡೆಸಿದ್ದಾರೆ. ತಕ್ಷಣವೇ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ಹಿಂದಕ್ಕೆ ತಳ್ಳಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಈ ಪ್ರತಿಭಟನೆಯಲ್ಲಿ ಸ್ಥಳೀಯ ಬಿಜೆಪಿ ಪ್ರಮುಖ ನಾಯಕರು, ಮಾಜಿ ಶಾಸಕರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಕಾಂಗ್ರೆಸ್ ಸರ್ಕಾರವು ದುರಾಡಳಿತ ನಡೆಸುತ್ತಿದ್ದು, ಸಾರ್ವಜನಿಕರ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಾಯಕರು ಆರೋಪಿಸಿದರು.
ತಮ್ಮ ಬೇಡಿಕೆಗಳು ಈಡೇರುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು. ಪೊಲೀಸರು ತಕ್ಷಣ ಕ್ರಮ ಕೈಗೊಂಡು ವಾತಾವರಣವನ್ನು ತಿಳಿಗೊಳಿಸಿದರಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಮುಂದುವರಿಸಲಾಗಿದೆ.




