Karwar News: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಇಂದು ಕಾರವಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕಿ ರೂಪಾಲಿ ನಾಯ್ಕ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಸಾರಿಗೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ನಗರದ ಮಿತ್ರ ಸಮಾಜ ಮೈದಾನದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಬಿಜೆಪಿಗರು ಸರಕಾರದ ವಿರುದ್ಧ ಘೋಷಣೆ ಕೂಗಿದ್ರು. ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ರಾಜ್ಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮೀಣ ರಸ್ತೆಗಳು ಹೊಂಡಗಳಿಂದ ಕೂಡಿದ್ದು, ವಾಹನ ಸಂಚಾರ ದುಸ್ತರವಾಗಿದೆ. ರಸ್ತೆ ಹದಗೆಟ್ಟಿರುವುದರಿಂದ ಬಸ್ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.
‘ಸೋರುವ ಬಸ್ಗಳು ಮತ್ತು ಹದಗೆಟ್ಟ ರಸ್ತೆಗಳ ನಡುವೆ ಉಚಿತ ಪ್ರಯಾಣದ ಗ್ಯಾರಂಟಿ ನೀಡುವುದರಿಂದ ಜನರಿಗೆ ಏನು ಪ್ರಯೋಜನ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ್ ಪ್ರಶ್ನಿಸಿದರು. ಈ ಕೂಡಲೇ ರಾಜ್ಯ ಸರ್ಕಾರ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು




