ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ

ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಗೊಂದಲ ಹಾಗೂ ಆಡಳಿತ ವೈಫಲ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, “ನೆನ್ನೆಯಷ್ಟೇ ಸಚಿವ ಸಂಪುಟ ವಿಸ್ತರಣೆ ನಡೆದಿದೆ. 20 ಸಚಿವರನ್ನು ಸೇರ್ಪಡೆ ಮಾಡುವ ಅವಕಾಶ ಇದ್ದರೂ ಕೇವಲ 19 ಮಂದಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಕೊನೆಯ ಕ್ಷಣದಲ್ಲಿಯೂ ಸಚಿವರ ಪಟ್ಟಿಯಲ್ಲಿ ಹೆಸರುಗಳನ್ನು ಬದಲಾಯಿಸಲಾಗಿದೆ. ಆದರೂ ಮುಖ್ಯಮಂತ್ರಿ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಸರ್ಕಾರದೊಳಗೆ ಗೊಂದಲವೇ ಹೆಚ್ಚಾಗಿದೆ” ಎಂದು ಆರೋಪಿಸಿದರು.

ಮುಂದುವರಿದು, “ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಭ್ರಷ್ಟಾಚಾರ ಹೆಚ್ಚುತ್ತಿದೆ. ಒಂದೆಡೆ ಬರಗಾಲದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರ ಅಧಿಕಾರದ ರಾಜಕೀಯದಲ್ಲೇ ನಿರತವಾಗಿದೆ. ಜನರ ಸಮಸ್ಯೆಗಳಿಗಿಂತ ಅಧಿಕಾರ ಉಳಿಸಿಕೊಳ್ಳುವುದೇ ಸರ್ಕಾರದ ಆದ್ಯತೆಯಾಗಿದೆ” ಎಂದು ಟೀಕಿಸಿದರು.

ಸಭಾಪತಿ ಹಾಗೂ ಉಪಸಭಾಪತಿ ಆಯ್ಕೆ ವಿಚಾರವನ್ನೂ ಪ್ರಸ್ತಾಪಿಸಿದ ಅವರು, “ಸಂವಿಧಾನಕ್ಕೆ ಗೌರವ ನೀಡುವ ಧೈರ್ಯ ಸರ್ಕಾರಕ್ಕೆ ಇಲ್ಲವೇ? ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಆಯ್ಕೆಯಾದ ಸಭಾಪತಿಗಳು ತಮ್ಮ ಅವಧಿ ಪೂರ್ಣಗೊಳಿಸುತ್ತಿದ್ದರು. ಆದರೆ ಈಗ ಅಧಿಕಾರದಲ್ಲಿರುವವರಿದ್ದರೂ ಹೊಸ ಆಯ್ಕೆ ನಡೆಸಿರುವುದು ಏಕೆ?” ಎಂದು ಪ್ರಶ್ನಿಸಿದರು.

ಬಸವರಾಜ ಹೊರಟ್ಟಿ ಅವರ ವಿಚಾರವಾಗಿ ಮಾತನಾಡಿದ ಅವರು, “ಹೊರಟ್ಟಿಯವರು ರಾಜೀನಾಮೆ ನೀಡಿದ್ದರೆ ಹೊಸ ಆಯ್ಕೆ ಮಾಡುವುದು ಸರಿ. ಆದರೆ ಅವರು ಅಧಿಕಾರದಲ್ಲಿದ್ದಾಗಲೇ ಈ ರೀತಿಯ ಕ್ರಮ ಕೈಗೊಂಡಿರುವುದು ಸರಿಯಲ್ಲ. ಇದರಿಂದ ಅವರಿಗೆ ನೋವಾಗಿದೆ. ಸರ್ಕಾರ ಅವರ ಬಳಿ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದರು.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸಾವಿರಾರು ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ. ಸರ್ಕಾರ ಸಮಸ್ಯೆ ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಭರವಸೆ ಈಡೇರಿಲ್ಲ. ಆದ್ದರಿಂದ ಅವರು ನೈತಿಕ ಹೊಣೆ ಹೊತ್ತು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಸಚಿವ ಸಂಪುಟದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರಿಗೆ ಮತ್ತೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿದ ಅವರು, “ಭ್ರಷ್ಟಾಚಾರದ ಆರೋಪ ಹೊಂದಿರುವವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಪರ ನಿಲುವನ್ನು ತೋರಿಸುತ್ತದೆ. ಇದು ಜನರಿಗೆ ತಪ್ಪು ಸಂದೇಶ ನೀಡುತ್ತದೆ” ಎಂದು ಆರೋಪಿಸಿದರು.

ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸಮರ್ಪಕ ಅವಕಾಶ ನೀಡದಿರುವುದನ್ನೂ ಟೀಕಿಸಿದ ಅವರು, “ಕಾಂಗ್ರೆಸ್ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ. ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ತತ್ವ ಪಾಲನೆಯಾಗಿಲ್ಲ” ಎಂದು ಹೇಳಿದರು.

ಕೊನೆಯಲ್ಲಿ, “ಯುವಕರಿಗೆ ಉದ್ಯೋಗ ಸೃಷ್ಟಿಸುವುದು, ಜನರ ಅಭಿವೃದ್ಧಿಗೆ ಆದ್ಯತೆ ನೀಡುವುದು ಸರ್ಕಾರದ ಕರ್ತವ್ಯ. ಆದರೆ ಸರ್ಕಾರ ಅಧಿಕಾರದ ರಾಜಕೀಯದಲ್ಲೇ ತೊಡಗಿದೆ. ಜನರ ಸಮಸ್ಯೆಗಳ ಕಡೆ ಗಮನಹರಿಸಿ ಪರಿಣಾಮಕಾರಿ ಆಡಳಿತ ನಡೆಸಬೇಕು” ಎಂದು ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

About The Author