35% ಮಳೆ ಕೊರತೆ… ಮುಂದೇನು ಧಾರವಾಡದ ಪರಿಸ್ಥಿತಿ

ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸಂತೋಷ್ ಲಾಡ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಸಭೆ ನಡೆಸಿದ ಸಚಿವರು, ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಈಗಾಗಲೇ ಭೇಟಿ ನೀಡಿದ್ದು, ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲೂಕುಗಳ ಗ್ರಾಮಗಳಿಗೆ ಭೇಟಿ ನೀಡಲಾಗುವುದು. ಬಳಿಕ ಅಳ್ನಾವರ ತಾಲೂಕಿನ ಗ್ರಾಮಗಳಲ್ಲೂ ಬರ ಪರಿಸ್ಥಿತಿ ಪರಿಶೀಲಿಸಲಾಗುವುದು ಎಂದಿದ್ದಾರೆ. ಜೂನ್ 1ರಿಂದ ಆಗಸ್ಟ್ 5ರವರೆಗೆ ಜಿಲ್ಲೆಯಲ್ಲಿ 299.7 ಮಿ.ಮೀ. ವಾಡಿಕೆ ಮಳೆಯಾಗಬೇಕಿದ್ದರೆ, 196.2 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇ.35ರಷ್ಟು ಮಳೆ ಕೊರತೆಯಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಗ್ರಾಮೀಣ ಪ್ರದೇಶದ 16 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 18 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರದ 82 ವಾರ್ಡ್‌ಗಳ ಪೈಕಿ 13 ವಾರ್ಡ್‌ಗಳಲ್ಲಿ 24×7 ನೀರು ಪೂರೈಕೆ ಮಾಡಲಾಗುತ್ತಿದ್ದು, ಉಳಿದ ವಾರ್ಡ್‌ಗಳಲ್ಲಿ 2ರಿಂದ 6 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ.

ಇನ್ನು ಜಿಲ್ಲೆಯಲ್ಲಿರುವ ಜಾನುವಾರುಗಳಿಗೆ ಮುಂದಿನ 43 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಏಳು ಮೇವು ಬ್ಯಾಂಕ್‌ಗಳಿಗೆ ಸ್ಥಳ ಗುರುತಿಸಲಾಗಿದೆ. ಬೆಳೆ ಸಮೀಕ್ಷೆ ಕಾರ್ಯವೂ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಮುಂದಿನ ಹಂತದಲ್ಲಿ ಸರ್ವೆ ನಂಬರ್ ಆಧಾರದಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರ ಪರಿಸ್ಥಿತಿಯ ನಡುವೆ ರೈತರಿಗೆ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About The Author