Hubli News: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧತೆ

Hubli News: ಗುರುವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹಲವು ವಿಚಾರಗಳನ್ನು ಪ್ರಸ್ತಾಪಿಸಲು ಬಿಜೆಪಿ ಸಜ್ಜಾಗಿದೆ. ಈ ನಡುವೆ ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದ್ದಾರೆ. ಸರ್ಕಾರ ಸಂಪೂರ್ಣವಾಗಿ ಹಗರಣಗಳಲ್ಲಿ ಮುಳುಗಿ ಹೋಗಿದೆ ಎಂದು ವಾಗ್ದಾಳಿ ನಡೆಸಿರುವ ಅವರು, ಅಧಿವೇಶನದಲ್ಲಿ ಸರ್ಕಾರದ ಹಗರಣಗಳ ಸರಮಾಲೆ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಹಗರಣ, ವಾಲ್ಮೀಕಿ ಹಗರಣ ಸೇರಿದಂತೆ ಹಲವು ವಿಚಾರಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಟೆಂಗಿನಕಾಯಿ ತಿಳಿಸಿದ್ದಾರೆ. ಗ್ಯಾರಂಟಿ ಹಗರಣಗಳನ್ನು ಮುಚ್ಚಿಹಾಕಲು ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಿಂದಿನ ಅವಧಿಯ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು ಎಂಬುದೇ ಗೊತ್ತಿಲ್ಲ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹಲವು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದ್ದಾರೆ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿ ವಿಚಾರಗಳನ್ನು ಅಧಿವೇಶನದಲ್ಲಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.

ಇನ್ನು ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ವಿಚಾರವಾಗಿಯೂ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ. ಹೊರಟ್ಟಿಯವರ ಮೇಲೆ ಒತ್ತಡ ತಂದು ರಾಜೀನಾಮೆ ಕೊಡಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದೇ 14ರಂದು ರಾಜೀನಾಮೆ ನೀಡುವುದಾಗಿ ಹೊರಟ್ಟಿಯವರು ಹೇಳಿದ್ದರು. ಆದರೆ ಏಕಾಏಕಿ ಅವರ ಮೇಲೆ ಒತ್ತಡ ತಂದು ರಾಜೀನಾಮೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ನಿಯೋಗ ಬಸವರಾಜ ಹೊರಟ್ಟಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಅವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ರಾಜ್ಯಪಾಲರಿಗೂ ಪತ್ರ ಬರೆದು ತಮ್ಮ ನೋವನ್ನು ಹೊರಹಾಕಿದ್ದಾರೆ. ತಲೆಯ ಮೇಲೆ ಗನ್ ಇಟ್ಟು ಒತ್ತಡ ಹಾಕಿದ ರೀತಿಯಲ್ಲಿ ಹೊರಟ್ಟಿಯವರಿಂದ ರಾಜೀನಾಮೆ ಕೊಡಿಸಲಾಗಿದೆ ಎಂದು ಟೆಂಗಿನಕಾಯಿ ಗಂಭೀರ ಆರೋಪ ಮಾಡಿದ್ದಾರೆ.

ಹಿರಿಯ ಸಭಾಪತಿಯನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಯಲ್ಲ. ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಎಂಎಲ್‌ಸಿಗಳು ಈ ಬಗ್ಗೆ ವಿಚಾರ ಮಾಡಬೇಕಿತ್ತು. ಒಬ್ಬ ಹಿರಿಯ ಸಭಾಪತಿಯನ್ನು ಈ ರೀತಿ ನಡೆಸಿಕೊಂಡಿರುವುದು ದುರದೃಷ್ಟಕರ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author