Uttara Kannada: ಪಾಳಾ ಹೋಬಳಿ ಕೆರೆ ತುಂಬಿಸುವ ಯೋಜನೆ: ಶಾಸಕ ಶಿವರಾಮ್ ಹೆಬ್ಬಾರ್‌ಗೆ ರೈತರ ಧನ್ಯವಾದ

Mundagod News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ್ ತಾಲೂಕಿನ ಪಾಳಾ ಹೋಬಳಿ ವ್ಯಾಪ್ತಿಯ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ-ಮುಂಡಗೋಡ್-ಬನವಾಸಿ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಪಾಳಾ ಗ್ರಾಮದ ರೈತರು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರುಗೌಡ . ಶಿವನಗೌಡ ಧನ್ಯವಾದ ಸಲ್ಲಿಸಿದ್ದಾರೆ.

ಈ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತರು ನೀರಿನ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದರು. ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿದು ಬಾರದ ಕಾರಣ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಉಂಟಾಗಿತ್ತು. ಇಂತಹ ಸಂದರ್ಭದಲ್ಲಿ ರೈತರ ಹಾಗೂ ಬಡವರ ಹಿತದೃಷ್ಟಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿದ್ದರು.

ಕಳೆದ 15 ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಯೋಜನೆಯ ಫಲವಾಗಿ ಪಾಳಾ ಹೋಬಳಿ ವ್ಯಾಪ್ತಿಯ ಬಹುತೇಕ ಕೆರೆಗಳು ನೀರಿನಿಂದ ತುಂಬಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಕೆರೆಗಳು ತುಂಬಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯೂ ಕಡಿಮೆಯಾಗಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪಾಳಾ ಗ್ರಾಮದ ರೈತರು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರುಗೌಡ ಬಿ. ಶಿವನಗೌಡ, “ರೈತರ ಸಂಕಷ್ಟವನ್ನು ಅರಿತು ಕೆರೆ ತುಂಬಿಸುವ ಯೋಜನೆಯನ್ನು ಜಾರಿಗೆ ತಂದ ಶಾಸಕ ಶಿವರಾಮ್ ಹೆಬ್ಬಾರ್ ಅವರ ಕಾರ್ಯ ಶ್ಲಾಘನೀಯ. ಈ ಯೋಜನೆಯಿಂದ ಪಾಳಾ ಹೋಬಳಿ ವ್ಯಾಪ್ತಿಯ ರೈತರಿಗೆ ದೊಡ್ಡ ಮಟ್ಟದ ನೆರವಾಗಿದೆ. ಇದಕ್ಕಾಗಿ ನಾವು ಅವರಿಗೇಲ್ಲರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ” ಎಂದು ಹೇಳಿದರು.

ಕೆರೆ ತುಂಬಿಸುವ ಯೋಜನೆಯಿಂದ ಈ ಭಾಗದ ರೈತರಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

About The Author