Haveri News: ಹಾನಗಲ್ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಹಾಗೂ ಪಾದಚಾರಿಗಳ ಸುಗಮ ಓಡಾಟಕ್ಕೆ ತೊಂದರೆಯಾಗುತ್ತಿರುವ ಅಕ್ರಮ ಪಾರ್ಕಿಂಗ್ ಮತ್ತು ರಸ್ತೆಗೆ ಅಂಗಡಿಗಳನ್ನು ವಿಸ್ತರಿಸಿರುವ ಕುರಿತು ಅಧಿಕಾರಿಗಳ ಸಭೆ ನಡೆಸಲಾಯಿತು.
ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ನಿರ್ದೇಶನದ ಮೇರೆಗೆ ಹಾನಗಲ್ ತಹಶೀಲ್ದಾರ್ ವಿಠಲ್ ಚೌಗಲಾ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ, ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಸೇರಿದಂತೆ ಆಟೋ ಚಾಲಕರ ಸಂಘ ಮತ್ತು ಟೆಂಪೋ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಪಟ್ಟಣದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಸುಸಜ್ಜಿತಗೊಳಿಸುವ ನಿಟ್ಟಿನಲ್ಲಿ ಮೊದಲು ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ ಮಾರ್ಕಿಂಗ್ ಮಾಡಲಾಗುವುದು. ಬಳಿಕ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಏಳು ದಿನಗಳ ಗಡುವು ನೀಡಲಾಗುವುದು ಎಂದು ತಹಶೀಲ್ದಾರ್ ವಿಠಲ್ ಚೌಗಲಾ ತಿಳಿಸಿದರು.
ನಿಗದಿಪಡಿಸಿದ ಪಾರ್ಕಿಂಗ್ ಸ್ಥಳದಲ್ಲೇ ವಾಹನಗಳನ್ನು ನಿಲ್ಲಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗುವುದು. ನಿಯಮ ಉಲ್ಲಂಘಿಸಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿದರೆ ದಂಡ ವಿಧಿಸುವುದರ ಜೊತೆಗೆ ಸಂಬಂಧಪಟ್ಟ ನಿಯಮಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ರಸ್ತೆಗೆ ಅಂಗಡಿಗಳನ್ನು ವಿಸ್ತರಿಸುವುದರಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕೂಡ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಹಾನಗಲ್ ಪಟ್ಟಣದಲ್ಲಿ ಸುಗಮ ಸಂಚಾರ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರಲು ಅಧಿಕಾರಿಗಳು ಮುಂದಾಗಿದ್ದಾರೆ.




