Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು 5.80 ಲಕ್ಷ ರೂಪಾಯಿ ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.

ಫಿರ್ಯಾದಿಯ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದು, ಅದರಲ್ಲಿದ್ದ ಸುಮಾರು 15 ಗ್ರಾಂ ತೂಕದ ಬಂಗಾರದ ಶಾರ್ಟ್ ನೆಕ್ಲೆಸ್‌, 30 ಗ್ರಾಂ ಬಂಗಾರದ ಉದ್ದನೆಯ ಹಾರ, 2 ಗ್ರಾಂ ಬಂಗಾರದ ಉಂಗುರ ಹಾಗೂ 10 ಗ್ರಾಂ ಬೆಳ್ಳಿ ನಾಣ್ಯವನ್ನು ಕಳ್ಳತನ ಮಾಡಲಾಗಿತ್ತು. ಕಳವಾದ ಸ್ವತ್ತಿನ ಒಟ್ಟು ಮೌಲ್ಯ ಸುಮಾರು 3 ಲಕ್ಷ 52 ಸಾವಿರ ರೂಪಾಯಿ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಈ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೇಲಾಧಿಕಾರಿಗಳ ಆದೇಶದ ಮೇರೆಗೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗದ ಮಲ್ಲಗೇನಹಳ್ಳಿ ನಿವಾಸಿ *ಸುಶೀಲಾ* ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ ನಿವಾಸಿ *ಸಾಯಿಲಕ್ಷ್ಮಿ* ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು *5 ಲಕ್ಷ 80 ಸಾವಿರ ರೂಪಾಯಿ ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣಗಳನ್ನು* ವಶಪಡಿಸಿಕೊಳ್ಳಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್ ಹಾಗೂ ಶಿರಸಿ ವೃತ್ತ ನಿರೀಕ್ಷಕ ಸಂಪತ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಶಿರಸಿ ನಗರ ಠಾಣೆಯ ಪಿಎಸ್‌ಐ ನರಸಿಂಹಲು ಮತ್ತು ತನಿಖಾ ಪಿಎಸ್‌ಐ ನಾರಾಯಣ ರಾಠೋಡ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ಕಾರವಾರ ತಾಂತ್ರಿಕ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

About The Author