ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆಯಾಗುವ ಸುಳಿವು ಸಿಕ್ಕಿದೆ. ಹೌದು, ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚಿಸಲಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿರುವ ಆ ಕಂಪ್ಲೀಟ್ ಅಪ್ಡೇಟ್ ಏನು ಅಂತ ಈ ವರದಿಯಲ್ಲಿ ನೋಡೋಣ ಬನ್ನಿ.
ಹೌದು, ಇತ್ತೀಚಿನ ದಿನಗಳಲ್ಲಿ ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಒಂಬತ್ತಕ್ಕೂ ಹೆಚ್ಚು ಬಾರಿ ಗಣನೀಯವಾಗಿ ಏರಿಕೆಯಾಗಿದೆ. ಆದರೂ ಕೂಡ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರಿ ಸಾರಿಗೆ ಸಂಸ್ಥೆಗಳು ಇದುವರೆಗೆ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರಲಿಲ್ಲ. ಆದರೆ ನಿರಂತರ ನಷ್ಟದಿಂದಾಗಿ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಅಂತ ಸಚಿವರು ಸ್ಪಷ್ಟಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಸ್ ದರ ಹೆಚ್ಚಳದ ಸಾಧಕ-ಬಾಧಕಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಲು, ಹಿರಿಯ ಐಎಎಸ್ ಅಧಿಕಾರಿ ‘ಅತುಲ್ ತಿವಾರಿ’ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿಯನ್ನು ರಚಿಸಲಾಗಿದೆ.
ಸಮಿತಿ ನೀಡುವ ವರದಿಯನ್ನು ಮುಖ್ಯಮಂತ್ರಿಗಳ ಜೊತೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗುತ್ತದೆ. ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲೂ ಅತಿಯಾದ ಆರ್ಥಿಕ ಹೊರೆಯಾಗದಂತೆ, ಎಲ್ಲ ದಿಕ್ಕುಗಳಿಂದಲೂ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಅಂತ ಸಚಿವರು ಭರವಸೆ ನೀಡಿದ್ದಾರೆ.
ಒಟ್ಟಿನಲ್ಲಿ ಸಾರಿಗೆ ನಿಗಮಗಳ ನಷ್ಟವನ್ನು ಸರಿದೂಗಿಸಲು ಸರ್ಕಾರ ದರ ಪರಿಷ್ಕರಣೆಗೆ ಮುಂದಾಗಿರುವುದು ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವ ಆತಂಕ ಮೂಡಿಸಿದ್ದು, ಸಮಿತಿಯ ವರದಿ ಬಂದ ಬಳಿಕವಷ್ಟೇ ಅಂತಿಮ ನಿರ್ಧಾರ ಹೊರಬರಲಿದೆ..




