ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದರ ವಿರುದ್ಧ ರಾಜ್ಯಾದ್ಯಂತ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಜೋರಾಗಿದ್ದು, ಚಿಕ್ಕಮಗಳೂರಿನಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಈಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಅಂತ ಕೇಳಿ ಬರ್ತಾ ಇದೆ..
ಎಸ್ ‘ಸಚಿವ ನಾಗೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಉಗ್ರ ಪ್ರತಿಭಟನೆ ನಡೆಸಿದರು. ಈ ವೇಳೆ ಆಕ್ರೋಶಗೊಂಡ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ, ಬ್ಯಾರಿಕೇಡ್ಗಳನ್ನು ತಳ್ಳಿ ಒಳನುಗ್ಗಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ಸಹ ನಡೆದಿದೆ.
ಕರ್ತವ್ಯದಲ್ಲಿದ್ದ ಪೊಲೀಸರಿಗೆ ಅಡ್ಡಿಪಡಿಸಿದ್ದಾರೆ ಹಾಗೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಇನ್ಸ್ಪೆಕ್ಟರ್ ಅಭಯ ಪ್ರಕಾಶ್ ಅವರು ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ನಗರಾಧ್ಯಕ್ಷ ಪುಷ್ಪರಾಜ್, ಯುವ ಮೋರ್ಚಾ ಮುಖಂಡ ಸಂತೋಷ್ ಕೊಟ್ಯಾನ್ ಸೇರಿದಂತೆ ಬರೋಬ್ಬರಿ 40 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಶೇಷವೆಂದರೆ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಹಿಳಾ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಿಸಲಾಗಿದೆ.
ಸಚಿವ ನಾಗೇಂದ್ರ ಅವರ ರಾಜೀನಾಮೆ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ರಾಜಕೀಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಕುರಿತ ನಿಮ್ಮ ಅಭಿಪ್ರಾಯವೇನು? ಕಮೆಂಟ್ ಮಾಡಿ ತಿಳಿಸಿ!




