ಕೆಪಿಎಸ್ಸಿ ವಲಯದಲ್ಲಿ ಮತ್ತೊಂದು ಅಚ್ಚರಿಯ ತಿರುವು ಸಿಕ್ಕಿದೆ. ಹೌದು ‘ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ED ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಬೆನ್ನಲ್ಲೇ, ಜುಲೈ 10ರಂದು ರಾಜ್ಯಪಾಲರು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯಪಾಲರ ಅಮಾನತು ಆದೇಶ ಕಾನೂನುಬಾಹಿರ ಎಂದು ತೀರ್ಪು ನೀಡಿದೆ. ಸಚಿವ ಸಂಪುಟದ ಸ್ಪಷ್ಟ ಶಿಫಾರಸು ಇಲ್ಲದೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ಕೋರ್ಟ್ ಪರಿಗಣಿಸಿದೆ.
ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಮುಂದಿನ 7 ದಿನಗಳ ಒಳಗಾಗಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ಪುನರ್ ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಇ.ಡಿ ತನಿಖೆ ಹಾಗೂ ಇತರೆ ಆರೋಪಗಳ ನಡುವೆಯೂ ಹೈಕೋರ್ಟ್ನಿಂದ ಈ ಕಾನೂನಾತ್ಮಕ ಆದೇಶ ಬಂದಿರುವುದು ಸಾಹುಕಾರ್ ಅವರಿಗೆ ದೊಡ್ಡ ರಿಲೀಫ್ ನೀಡಿದಂತಾಗಿದೆ.
ಆದಾಗ್ಯೂ, ಹೈಕೋರ್ಟ್ ತನ್ನ ಆದೇಶದಲ್ಲಿ ಕೆಲವು ಪ್ರಮುಖ ಷರತ್ತುಗಳನ್ನೂ ವಿಧಿಸಿದೆ. ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರ ನೇಮಕಾತಿಗೆ ಸಂಬಂಧಿಸಿದ ಯಾವುದೇ ಕಡತಗಳ ಬಗ್ಗೆ ಅವರು ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಜೊತೆಗೆ, ಅವರ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ಈ ಆದೇಶ ಅಡ್ಡಿಯಾಗುವುದಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ.
ಹೈಕೋರ್ಟ್ ಆದೇಶದ ಬಳಿಕ ಶಿವಶಂಕರಪ್ಪ ಸಾಹುಕಾರ್ ಮತ್ತೆ ಅಧ್ಯಕ್ಷ ಸ್ಥಾನಕ್ಕೇರುವುದು ಖಚಿತವಾಗಿದ್ದು, ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ನಿಮ್ಮ ಅಭಿಪ್ರಾಯವೇನು? ಕಮೆಂಟ್ ಮಾಡಿ ತಿಳಿಸಿ..




