ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಚಲನಚಿತ್ರ ನಿರ್ಮಾಪಕ ಸಂಜಯ್ ಗೌಡ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.
ಪದ್ಮನಾಭನಗರದಲ್ಲಿ ಕಾಂಗ್ರೆಸ್ ಶಾಸಕರ ಕಚೇರಿಯನ್ನು ಉದ್ಘಾಟನೆ ಮಾಡಿಯೇ ಮಾಡುತ್ತೇವೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಸಂಘಟನೆ ಹಾಗೂ ಜನಬೆಂಬಲವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಸಂಜಯ್ ಗೌಡ ಹೇಳಿದರು.
ಪಕ್ಷದ್ರೋಹ ಮಾಡಿ ಕಾಂಗ್ರೆಸ್ ತೊರೆದವರ ವಿರುದ್ಧ ಪಕ್ಷ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಯಾವುದೇ ರೀತಿಯ ಆಮಿಷಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಒಳಗಾಗಬಾರದು ಎಂದು ಕರೆ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಒತ್ತಡಕ್ಕೂ ಬಗ್ಗುವುದಿಲ್ಲ, ಜಗ್ಗುವುದಿಲ್ಲ, ಕುಗ್ಗುವುದಿಲ್ಲ. ವ್ಯಕ್ತಿಪೂಜೆಗಿಂತ ಪಕ್ಷಪೂಜೆಗೆ ಕಾಂಗ್ರೆಸ್ ಕಾರ್ಯಕರ್ತರು ಆದ್ಯತೆ ನೀಡುತ್ತಾರೆ ಎಂದು ಸಂಜಯ್ ಗೌಡ ಹೇಳಿದರು.
ಪದ್ಮನಾಭನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಂಘಟಿಸಿ, ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಗೆಲುವು ತಂದುಕೊಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
