Uttara Kannada: ಮುಂಡಗೋಡ: ಮುಂಡಗೋಡದಿಂದ ಯಲ್ಲಾಪುರಕ್ಕೆ ತೆರಳುವ ರಾಜ್ಯ ಹೆದ್ದಾರಿಯ ಟಿಬೆಟಿಯನ್ ಕ್ಯಾಂಪ್ ಸಮೀಪ ಪ್ರವಾಸಿಗರಿಗೆ ಸೂಕ್ತ ಪಾರ್ಕಿಂಗ್ ಹಾಗೂ ಬಸ್ ನಿಲ್ದಾಣದ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಭಾಗದಲ್ಲಿ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಸಂಚರಿಸುತ್ತಿದ್ದು, ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲೇ ವಾಹನಗಳನ್ನು ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ, ಬಸ್ ನಿಲ್ದಾಣದ ವ್ಯವಸ್ಥೆಯೂ ಇಲ್ಲದಿರುವುದರಿಂದ ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮಹದೇವಪ್ಪ ಹ್ಯಾಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸ್ಥಳೀಯರಾದ ರವಿ ರಾಠೋಡ್ ಮಾತನಾಡಿ, ಇಲ್ಲಿ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ಬಸ್ ನಿಲ್ದಾಣ ಹಾಗೂ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ರಸ್ತೆ ಬದಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಿಸಿಕೊಡುವಂತೆ ಶಾಸಕರಿಗೆ ಮನವಿ ಮಾಡಿದ್ದು, ಶೀಘ್ರದಲ್ಲೇ ಬಸ್ ನಿಲ್ದಾಣ ನಿರ್ಮಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಇದರ ನಡುವೆ ರಸ್ತೆ ಬದಿಯಲ್ಲಿ ನಡೆಯುತ್ತಿರುವ ಕಾಂಪೌಂಡ್ ನಿರ್ಮಾಣ ಕಾಮಗಾರಿಯ ಕುರಿತು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಹೆದ್ದಾರಿ ನಿಯಮಗಳನ್ನು ಉಲ್ಲಂಘಿಸಿ ಕಾಂಪೌಂಡ್ ನಿರ್ಮಿಸಲಾಗುತ್ತಿದೆ ಹಾಗೂ ಕಾಮಗಾರಿ ನಡೆಯುತ್ತಿರುವ ಜಾಗ ಲೋಕೋಪಯೋಗಿ ಇಲಾಖೆಗೆ ಸೇರಿದೆ ಎಂದು ಆರೋಪಿಸಿರುವ ಸಾರ್ವಜನಿಕರು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲಕ್ಕಾಗಿ ಕೂಡಲೇ ಪಾರ್ಕಿಂಗ್ ಮತ್ತು ಬಸ್ ನಿಲ್ದಾಣ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ, ಕಾಂಪೌಂಡ್ ನಿರ್ಮಾಣದ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
