ಖಾಲಿ ಸೈಟ್‌ಗಳಿಗೆ ಬಿಗ್ ಆಕ್ಷನ್ – ಮಾಲೀಕರಿಗೆ ಪಾಲಿಕೆ ಶಾಕ್!

ಬೆಂಗಳೂರಿನಲ್ಲಿ ಖಾಲಿ ನಿವೇಶನಗಳನ್ನು ಹಾಗೆಯೇ ಬಿಟ್ಟು, ಅಲ್ಲಿ ಕಸ ಸುರಿಯುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಿಗ್ ವಾರ್ನಿಂಗ್ ನೀಡಿದೆ. ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯ ಮುಂದುವರಿಸಿದರೆ ಅಂತಹ ಖಾಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪಾಲಿಕೆ ಈಗ ಗಂಭೀರ ತೀರ್ಮಾನ ಕೈಗೊಂಡಿದೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಈ ಕುರಿತು ಖಡಕ್ ಎಚ್ಚರಿಕೆ ನೀಡಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಸೇರಿದಂತೆ ವಿವಿಧೆಡೆ ಖಾಲಿ ನಿವೇಶನಗಳಲ್ಲಿ ಕಸ ಸುರಿದು ಪರಿಸರ ಮಾಲಿನ್ಯ ಉಂಟುಮಾಡುತ್ತಿರುವ ಸ್ಥಳಗಳ ಸ್ವಚ್ಛತೆಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಜಿಬಿಎ ಅಧಿಕಾರಿಗಳು, ಖಾಲಿ ನಿವೇಶನಗಳ ಮಾಲೀಕರಿಗೆ ಕಸ ತೆರವುಗೊಳಿಸಲು ನೀಡಿದ್ದ ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಮ್ಮನಪಾಳ್ಯ ಮುಖ್ಯ ರಸ್ತೆ ಸೇರಿದಂತೆ ಹಲವೆಡೆ ಖಾಸಗಿ ನಿವೇಶನಗಳಲ್ಲಿ ಬಿದ್ದಿರುವ ಕಸದ ರಾಶಿಯನ್ನು ಪರಿಶೀಲಿಸಿದ ಆಯುಕ್ತರು, ಕಸ ಹಾಕುವವರಿಗೆ ಭಾರಿ ದಂಡ ವಿಧಿಸುವಂತೆ ಸೂಚಿಸಿದ್ದಾರೆ. ಅಲ್ಲದೆ, ತಮ್ಮ ಖಾಲಿ ಜಾಗವನ್ನು ಸ್ವಚ್ಛವಾಗಿಟ್ಟುಕೊಳ್ಳದ ಮಾಲೀಕರಿಗೆ ತಕ್ಷಣವೇ ನೋಟಿಸ್ ಜಾರಿ ಮಾಡಿ, ಸ್ವಂತ ಖರ್ಚಿನಲ್ಲಿ ತ್ಯಾಜ್ಯ ತೆರವುಗೊಳಿಸುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಆ ಜಾಗವನ್ನು ಪಾಲಿಕೆ ವಶಕ್ಕೆ ಪಡೆಯಲಾಗುವುದು ಎಂದು ಎಚ್ಚರಿಕೆಯ ಫಲಕಗಳನ್ನು ಹಾಕಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಇದೇ ವೇಳೆ, ಬೆಂಗಳೂರು ನಗರದಲ್ಲಿ ಒಟ್ಟು 1,700 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ವೈಟ್ ಟಾಪಿಂಗ್ ಕಾಮಗಾರಿ ಶೇ. 51ರಷ್ಟು ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಡಿಸೆಂಬರ್ ಒಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

About The Author