Haveri News: ಹಾನಗಲ್: ಹೆರಿಗೆ ನೋವಿನಿಂದ ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹಾನಗಲ್ ತಾಲೂಕಿನ ಭವಾನಿ ಮಂಜುನಾಥ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ನೋವು ಹೆಚ್ಚಾಗಿದ್ದರೂ ವೈದ್ಯರು ಹಾಗೂ ಸಿಬ್ಬಂದಿ ಸಮರ್ಪಕವಾಗಿ ತಪಾಸಣೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಗರ್ಭಿಣಿಯ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಮಾರು 25 ದಿನಗಳ ಕಾಲ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡದಿರುವುದೇ ಪರಿಸ್ಥಿತಿ ಕೈಮೀರುವುದಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಆರೋಗ್ಯ ಸಚಿವರು, ಆರೋಗ್ಯ ಇಲಾಖೆ ಅಧಿಕಾರಿಗಳು, ಹಾವೇರಿ ಜಿಲ್ಲಾಡಳಿತ, ಹಾನಗಲ್ ಶಾಸಕರು, ತಹಶೀಲ್ದಾರ್ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ದೂರು ಸಲ್ಲಿಸಿ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.
ಮಗುವಿನ ಶವದೊಂದಿಗೆ ಹಾನಗಲ್ ತಾಲೂಕು ಆಸ್ಪತ್ರೆ ಎದುರು ಕುಟುಂಬಸ್ಥರು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು.
ಸ್ಥಳಕ್ಕೆ ನೋಡಲ್ ಅಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದರು. ಪ್ರಕರಣದ ಕುರಿತು ತನಿಖೆ ನಡೆಸಲು ತಂಡ ರಚಿಸಲಾಗುವುದು. ತನಿಖೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
