Haveri News: ಶಿಗ್ಗಾವಿ: ಪಟ್ಟಣದ ಹನುಮಾನ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ಹಿನ್ನೆಲೆ ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪಿರ ಖಾದ್ರಿ ಅವರು ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಸೈಯದ್ ಅಜ್ಜಂಪಿರ ಖಾದ್ರಿ ಅವರು ಹನುಮಾನ ಮೂರ್ತಿಗೆ ಮಾಲಾರ್ಪಣೆ ಮಾಡಿ ಆಶೀರ್ವಾದ ಪಡೆದರು. ಬಳಿಕ ದೇವಸ್ಥಾನದ ಆವರಣ ಹಾಗೂ ಘಟನೆ ನಡೆದಿದೆ ಎನ್ನಲಾದ ಸ್ಥಳವನ್ನು ವೀಕ್ಷಿಸಿ, ಸ್ಥಳೀಯರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ಇಂತಹ ಘಟನೆ ನಡೆದಿರುವುದು ಖಂಡನೀಯ. ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕು. ಘಟನೆಗೆ ಸಂಬಂಧಿಸಿದ ಹಿನ್ನೆಲೆಯನ್ನು ಕೂಡಲೇ ಬಹಿರಂಗಪಡಿಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶಿಗ್ಗಾಂವ–ಸವಣೂರು ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
