ಜನರ ಸಮಸ್ಯೆಗಳಿಗೆ ನೇರವಾಗಿ ಮತ್ತು ತುರ್ತಾಗಿ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹಾಗೂ ವಿನೂತನ ಹೆಜ್ಜೆಯೊಂದನ್ನು ಇಟ್ಟಿದ್ದಾರೆ. ಇನ್ನುಮುಂದೆ ಎಲ್ಲಾ ಸಚಿವರು ತಿಂಗಳಿಗೆರಡು ದಿನ ಕಡ್ಡಾಯವಾಗಿ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ ಎಂದು ಸಿಎಂ ಘೋಷಿಸಿದ್ದಾರೆ.
ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸಲು ಮತ್ತು ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಹೊಸ ವ್ಯವಸ್ಥೆಯೊಂದನ್ನು ರೂಪಿಸಲಾಗಿದೆ. ಇದರನ್ವಯ ಪ್ರತಿಯೊಬ್ಬ ಸಚಿವರು ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರದಂದು ತಾವು ಉಸ್ತುವಾರಿ ಹೊತ್ತಿರುವ ಅಥವಾ ಹಂಚಿಕೆ ಮಾಡಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಸಭೆಗಳನ್ನು ನಡೆಸಲಿದ್ದಾರೆ. ಇದರ ಮುಂದುವರಿದ ಭಾಗವಾಗಿ ಹೋಬಳಿ ಮತ್ತು ಪಂಚಾಯತ್ ಮಟ್ಟದಲ್ಲೂ ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೆ ಸಚಿವರು ಭೇಟಿ ನೀಡುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಜನರ ಭಾವನೆಗಳನ್ನು ಹತ್ತಿರದಿಂದ ಅರಿತು ಸರ್ಕಾರಕ್ಕೆ ತಲುಪಿಸಲು ಸಹಾಯವಾಗುವಂತೆ ‘ಪ್ರಜಾಸೇವೆ’ ಇಲಾಖೆಯನ್ನು ಸಹ ರಚಿಸಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ತಲೆದೋರಿರುವ ಬರಗಾಲ ಪರಿಸ್ಥಿತಿಯ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ಶೀಘ್ರದಲ್ಲೇ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಈಗಾಗಲೇ ಪ್ರತಿ ಕ್ಷೇತ್ರಕ್ಕೆ ಅನುದಾನ ನೀಡಲಾಗಿದೆ. ಪ್ರವಾಸ ಅಧ್ಯಯನ ಮುಕ್ತಾಯವಾದ ಬಳಿಕ ಕೇಂದ್ರಕ್ಕೆ ನಿಯೋಗ ತೆರಳಿ ಪರಿಹಾರಕ್ಕಾಗಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್, ಬಡವರು ಮತ್ತು ಬರದ ಪರಿಸ್ಥಿತಿಯ ಬಗ್ಗೆ ಕಿಂಚಿತ್ ಕಾಳಜಿ ಇಲ್ಲದ ವಿಪಕ್ಷಗಳು ಕೇವಲ ರಾಜಕೀಯ ಲಾಭಕ್ಕಾಗಿ ಆರೋಪ ಮಾಡುತ್ತಿವೆ ಎಂದರು. ಹಾಗೇನೇ ‘SIR ಪ್ರಕ್ರಿಯೆಯಲ್ಲಿ ಬಿಟ್ಟುಹೋಗಿರುವವರ ಹೆಸರುಗಳನ್ನು ಮರು ಸೇರ್ಪಡೆಗೊಳಿಸಲು ಚುನಾವಣಾ ಆಯೋಗಕ್ಕೆ ಕೋರಲಾಗಿದೆ ಎಂದಿರುವ ಸಿಎಂ, ಎಲ್ಲಾ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಯತ್ತ ಸಂಪೂರ್ಣ ಗಮನ ಹರಿಸಿ ಜನರಿಗೆ ಪಾರದರ್ಶಕ ಆಡಳಿತ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದರು.
