ಫ್ರೀಡಂ ಪಾರ್ಕ್‌ನಲ್ಲಿ ಬಿಗ್ ಪ್ರತಿಭಟನೆ – ಕೇಂದ್ರಕ್ಕೆ ಸಿದ್ದು ಖಡಕ್ ವಾರ್ನಿಂಗ್!

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.

ಹೇಗಾದರೂ ಮಾಡಿ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಬೇಕು ಎಂಬುದು ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ಹುನ್ನಾರವಾಗಿದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದ ಜಾಗವನ್ನು ಉತ್ತರಾಖಂಡದ ಕೆಲವು ವ್ಯಕ್ತಿಗಳು ‘ಶುದ್ಧೀಕರಣ’ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸಿದ್ದರಾಮಯ್ಯ, ಇದು ಕೇವಲ ಖರ್ಗೆ ಅವರಿಗೆ ಮಾತ್ರವಲ್ಲ, ಇಡೀ ದಲಿತ ಸಮುದಾಯಕ್ಕೆ ಹಾಗೂ ಸಂವಿಧಾನಕ್ಕೆ ಎಸಗಿರುವ ಅಪಮಾನ ಎಂದರು.

ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು, ಆದರೆ ಆ ಅನ್ಯಾಯವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ಅವರ ಮೇಲೆಯೇ ಎಫ್‌ಐಆರ್ ದಾಖಲಿಸಲಾಗಿದೆ, ರಾಹುಲ್ ಗಾಂಧಿ ಅವರ ಧ್ವನಿಯನ್ನು ಹತ್ತಿಕ್ಕಲು ಮತ್ತು ಬಾಯಿ ಮುಚ್ಚಿಸಲು ಬಿಜೆಪಿ ಈ ರೀತಿ ಕುತಂತ್ರ ಮಾಡುತ್ತಿದೆ, ಈ ಹಿಂದೆ ಕೂಡ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಪಡಿಸುವ ಮೂಲಕ ಇಂತಹದೇ ಕಾನೂನುಬಹಿರ ಕ್ರಮಗಳನ್ನು ಕೇಂದ್ರ ಸರ್ಕಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಇನ್ನು ಅದರ ಜೊತೆಗೆ ‘ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಈ ರಾಜಕೀಯ ಪ್ರೇರಿತ ಕೇಸನ್ನ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ ಸಿದ್ದರಾಮಯ್ಯ, ಬಿಜೆಪಿಯ ಈ ಸಂವಿಧಾನ ವಿರೋಧಿ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲೂ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

About The Author