ಗಣೇಶ ಹಬ್ಬಕ್ಕೆ ಊರಿಗೆ ಹೋಗ್ತೀರಾ? ರಸ್ತೆಗಿಳಿಯಲಿವೆ 300 ಸ್ಪೆಷಲ್ ಬಸ್!

ಗೌರಿ ಗಣೇಶ ಹಬ್ಬದ ಸಂಭ್ರಮದಲ್ಲಿ ತಮ್ಮೂರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಂದರೆ ಕೆಕೆಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 10 ರಿಂದ 13ರವರೆಗೆ ರಾಜ್ಯದ ವಿವಿಧ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಹಬ್ಬದ ಸಮಯದಲ್ಲಿ ಉಂಟಾಗುವ ಭಾರೀ ಜನದಟ್ಟಣೆಯನ್ನು ನಿಯಂತ್ರಿಸಲು, ಸೆಪ್ಟೆಂಬರ್ 11, 12 ಮತ್ತು 13 ರಂದು ಬೆಂಗಳೂರಿನಿಂದ ಕೆಕೆಆರ್‌ಟಿಸಿ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ನಿತ್ಯದ ಬಸ್‌ಗಳ ಜೊತೆಗೆ ಹೆಚ್ಚುವರಿಯಾಗಿ ಬರೋಬ್ಬರಿ 300 ವಿಶೇಷ ಬಸ್‌ಗಳನ್ನು ಬಿಡಲಾಗುತ್ತಿದೆ.

ಇನ್ನು ಹಬ್ಬ ಮುಗಿದ ಬಳಿಕ ವಾಪಸ್ ಬರುವವರಿಗಾಗಿ ಸೆಪ್ಟೆಂಬರ್ 15 ರಿಂದ 20 ರವರೆಗೆ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರು ಹಾಗೂ ಇತರ ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚಿನ ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ. ಪ್ರಯಾಣಿಕರು ಕೊನೆಯ ಕ್ಷಣದ ನೂಕುನುಗ್ಗಲು ಹಾಗೂ ತೊಂದರೆಯನ್ನು ತಪ್ಪಿಸಲು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಹಾಗೂ ಅಂತರರಾಜ್ಯಗಳಲ್ಲಿರುವ ಒಟ್ಟು 22 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಅಥವಾ ಆನ್‌ಲೈನ್ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದು. ಸಾರ್ವಜನಿಕರು ಕೆಕೆಆರ್‌ಟಿಸಿಯ ಈ ವಿಶೇಷ ಸೌಲಭ್ಯದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ನಿಗಮವು ಮನವಿ ಮಾಡಿದೆ..

About The Author