Haveri News: ಬಿಜೆಪಿ ಹಾಗೂ ಎನ್ಡಿಎ ಮೈತ್ರಿಕೂಟ, ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಅಪಾರ ಸಂಖ್ಯೆಯ ರೈತರು ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದು ಜೆಡಿಎಸ್ ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಣೇಬೆನ್ನೂರು ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗಿತ್ತು. ಮಾಜಿ ಶಾಸಕ ಅರುಣಕುಮಾರ ಪೂಜಾರ ಹಾಗೂ ತಮ್ಮ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು. ಇದೀಗ ರೈತರ ಪರಿಸ್ಥಿತಿಯನ್ನು ಪರಿಗಣಿಸಿ ತಾಲೂಕನ್ನು ಬರಗಾಲ ಪ್ರದೇಶವೆಂದು ಘೋಷಿಸಿರುವುದು ಸ್ವಾಗತಾರ್ಹ ಎಂದರು.
ಆದರೆ ಕೇವಲ ಬರಗಾಲ ಘೋಷಣೆ ಮಾಡಿದರೆ ಸಾಲದು. ಬರದಿಂದ ಹಾನಿಗೊಳಗಾಗಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಪ್ರತಿ ಎಕರೆಗೆ 50 ಸಾವಿರ ರೂಗಳ ಪರಿಹಾರ ನೀಡುವ ಮೂಲಕ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದರು.
ರೈತರಿಗೆ ಮತ್ತೊಂದು ದೊಡ್ಡ ಸಮಸ್ಯೆಯಾಗಿರುವ ವಿದ್ಯುತ್ ಲೋಡ್ಶೆಡ್ಡಿಂಗ್ ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಗೌಡಶಿವಣ್ಣನವರ ಒತ್ತಾಯಿಸಿದರು.
ಮಳೆ ಕೊರತೆಯಿಂದ ಈಗಾಗಲೇ ಬೆಳೆಗಳು ಸಂಕಷ್ಟದಲ್ಲಿದ್ದು, ಇಂತಹ ಸಂದರ್ಭದಲ್ಲಿ ಮತ್ತೆ ಲೋಡ್ಶೆಡ್ಡಿಂಗ್ ಮಾಡುತ್ತಿರುವುದರಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹಿಂಗಾರು ಬೆಳೆಯನ್ನು ಉಳಿಸಿಕೊಳ್ಳಲು ರೈತರಿಗೆ ಸಮರ್ಪಕ ವಿದ್ಯುತ್ ಅಗತ್ಯವಿದೆ. ಆದ್ದರಿಂದ ಸರ್ಕಾರ ಕೂಡಲೇ ಲೋಡ್ಶೆಡ್ಡಿಂಗ್ ತೆರವುಗೊಳಿಸಿ ಪ್ರತಿದಿನ 10 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮುಂದುವರಿದರೆ ರೈತರಿಗೆ ಹಿಂಗಾರು ಬೆಳೆಯನ್ನೂ ರಕ್ಷಿಸಿಕೊಳ್ಳುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಹಿತದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ರಾಣೇಬೆನ್ನೂರು ತಾಲೂಕಿನ ಹುಣಸಿಕಟ್ಟಿ ಬಳಿ ಕಲ್ಲು ಕ್ವಾರಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ 3 ಕೋಟಿ ರೂ ದಂಡ ವಿಧಿಸಿರುವ ಬಗ್ಗೆ ಮಾತನಾಡಿ, ಪರವಾನಗಿ ನಿಯಮ ಉಲ್ಲಂಘನೆ ಹಾಗೂ ನಿಗದಿತ ವ್ಯಾಪ್ತಿಯನ್ನು ಮೀರಿ ಗಣಿಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರ ಕ್ವಾರಿಗೆ 3ಕೋಟಿ ರೂಗಳ ದಂಡ ವಿಧಿಸಿರುವುದಾಗಿ ವರದಿಯಾಗಿದೆ. ಇಲಾಖೆಯ ನೋಟಿಸ್ ಪ್ರಕಾರ ದಂಡವನ್ನು ಆರು ತಿಂಗಳ ಅವಧಿಯಲ್ಲಿ ಮೂರು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ ಆದ್ದರಿಂದ ಸರ್ಕಾರದ ಸಂಪತ್ತಿಗೆ ಸಂಬಂಧಿಸಿದ ಅಕ್ರಮದ ಆರೋಪ ಎದುರಾಗಿರುವ ಹಿನ್ನೆಲೆಯಲ್ಲಿ ಸಚಿವ ರುದ್ರಪ್ಪ ಲಮಾಣಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ನಿಂಗಪ್ಪ ಸತ್ಯಪ್ಪನವರ, ನಿಂಗರಾಜ ಹೊನ್ನಾಳಿ, ಶಿವಪುತ್ರಪ್ಪ ನಡುವಿನಮನಿ, ಲಕ್ಷ್ಮಿ ಕದರಮಂಡಲಗಿ, ಉಷಾ ಜಾಡಮಲಿ, ಗುರುರಾಜ ಬೋಜನವರ, ಕಾಂತೇಶ ಕದರಮಂಡಲಗಿ, ಚಂದ್ರಪ್ಪ ಆಲೂರ, ನಾಗಣ್ಣ ಕ್ಯಾತಾಳಿ, ಪರಶುರಾಮ ಕಸವಾಳ, ಕಸ್ತೂರಿ ಅರ್ಕಸಾಲಿ ಸೇರಿದಂತೆ ಮತ್ತಿತರರು ಇದ್ದರು.




