Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು.

ಈ ವಿರುದ್ಧ ಇಂದು ಎಕ್ಸ್ ಖಾತೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (KPSC) ವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ. ಇವರ ವರಸೆ ಹೇಗಿದೆ ಎಂದರೆ ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ!’; ‘ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ!!’ ಮುಖ್ಯಮಂತ್ರಿಗೆ ಶಾಸನದ ಮಹತ್ವವೇ ಗೊತ್ತಿಲ್ಲದಂತಿದೆ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ಕಿಡಿಕಾರಿದ್ದಾರೆ.

ಕೆಪಿಎಸ್ಸಿ ಸಂಸ್ಥೆ ಚೆನ್ನಾಗಿಯೇ ಇದೆ, ಕೆಟ್ಟ ಜನ ಬಂದು ಕೂತಿದ್ದಾರಷ್ಟೇ. ಬೇಲಿಯೇ ಹೊಲ ಮೇಯುತ್ತಿದೆ. ಅಲ್ಲಿಗೆ ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ವಿಧಾನಸೌಧದ 3ನೇ ಮಹಡಿಯಲ್ಲಿ ಕೂತವರೇ ಎಸಗಿದ ಪಾಪವಲ್ಲವೇ ಇದು? ಆ ಲೆಕ್ಕಕ್ಕೆ ಬಂದರೆ ವಿಧಾನಸೌಧವನ್ನೇ ಮುಚ್ಚಬೇಕು. ನಿಮ್ಮ ಸಾರಥ್ಯದಲ್ಲಿ ಅದೂ ನಡೆದುಹೋಗಲಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

ಬೇಜವಾಬ್ದಾರಿಯಿಂದ ಚಪಲಕ್ಕೆ ನಾಲಿಗೆ ಜಾರುವ ಮೊದಲು ಕೆಪಿಎಸ್ಸಿ ಎಂದರೆ ಏನು? ಅದರ ಸಂರಚನೆ, ಸ್ವರೂಪ ಹೇಗಿರುತ್ತದೆ? ಸಾಂವಿಧಾನಿಕವಾಗಿ ಅದಕ್ಕಿರುವ ರಕ್ಷಣೆ ಏನು? ಆ ಸಂಸ್ಥೆ ನಡೆದುಬಂದ ಹಾದಿ, ಹೆಗ್ಗಳಿಕೆ ಬಗ್ಗೆ ತಿಳಿದುಕೊಳ್ಳಿ. ಹೊಲಕ್ಕೆ ಕಳೆ ಬಿದ್ದರೆ ಅದನ್ನು ಕಿತ್ತೆಸೆಯಬೇಕು, ಹೊಲಕ್ಕೇ ವಿಷವುಣಿಸುವ ಕೆಲಸ ಆಗಬಾರದು ಎಂದು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

About The Author