Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಿಎಂ, ಪ್ರಜಾಪ್ರಭುತ್ವ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಪಡಿಸಿ, ಹೊಸದಾಗಿ ಈ ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಮತದಾನದ ಹಕ್ಕು ಎಂದರೆ ಬದುಕುವ ಹಕ್ಕು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಮತದಾನದ ಹಕ್ಕಿನ ಪರವಾಗಿ ಬೆಂಗಳೂರಿನಿಂದಲೇ ಧ್ವನಿ ಎತ್ತಿದ್ದಾರೆ. ಕೇಂದ್ರ ಸರ್ಕಾರ ಹೇಗೆ ಮತಗಳ್ಳತನ ಮಾಡಿ, ಮತದಾರರ ಹಕ್ಕನ್ನು ಕಸಿಯುತ್ತಿದೆ ಎಂದು ಬಹಿರಂಗಪಡಿಸಿದ್ದಾರೆ. ಸಾಮಾನ್ಯ ಜನರ ಮತದಾನದ ಹಕ್ಕನ್ನು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸಿಎಂ ಆರೋಪಿಸಿದ್ದಾರೆ.
ಕರ್ನಾಟಕದಲ್ಲೂ 1 ಕೋಟಿಗೂ ಅಧಿಕ ಮತಗಳನ್ನು ತೆಗೆದುಹಾಕಲಾಗಿದೆ. ಈ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ. ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಮತ್ತಷ್ಟು ಸಮಯ ನೀಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬುಧವಾರ ಮನವಿ ಮಾಡಿದ್ದೇನೆ. ಮತದಾರರ ಪಟ್ಟಿ ಅಂತಿಮವಾಗಲಿ, ನಂತರ ಇದರ ವಿರುದ್ಧ ಯಾವ ರೀತಿ ಧ್ವನಿ ಎತ್ತಿ ಹೋರಾಟ ಮಾಡಬೇಕು ಎಂದು ತಿಳಿಸುವೆ.
ಚುನಾವಣಾ ಆಯೋಗದೊಳಗಿನ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡಿದ್ದು, ಆಯೋಗದ ಸ್ವಾಯತ್ತ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಬಹುಮತದ (ಮೂರನೇ ಎರಡರಷ್ಟು) ಸದಸ್ಯರ ಬೆಂಬಲ ಸಿಗದೇ ಏಕಪಕ್ಷೀಯವಾಗಿ ಯಾವುದೇ ಘೋಷಣೆ, ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಚುನಾವಣಾ ಆಯೋಗದ ಹೆಸರಿನಲ್ಲಿ ರಾಜ್ಯಗಳ ಅಧಿಕಾರಿಗಳನ್ನು ಬೆದರಿಸಲು ಸಾಧ್ಯವಿಲ್ಲ. ನೈತಿಕ ಹೊಣೆಗಾರಿಕೆಯನ್ನು ಅರಿತು ಮುಖ್ಯ ಚುನಾವಣಾ ಆಯುಕ್ತರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುವುದು ಉತ್ತಮ. ಹೊಸ ಎಸ್‌ಐಆರ್ ಪ್ರಕ್ರಿಯೆ ನಡೆಸಬೇಕು ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಖಚಿತಪಡಿಸಬೇಕು ಎಂದು ಸಿಎಂ ಡಿಕೆಶಿ ಹೇಳಿದ್ದಾರೆ.
ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳಿಗೆ ಸಂಬಂಧಿಸಿದಂತೆ ಫಾರ್ಮ್ 6, 7 ಮತ್ತು 8 ಸೇರಿದಂತೆ ಅನೇಕ ಅರ್ಜಿಗಳಿದ್ದು, ಈ ಪ್ರಕ್ರಿಯೆ ಪ್ರಜಾಸತ್ತಾತ್ಮಕವಾಗಿಲ್ಲ. ಇಲ್ಲಿ ಅನಕ್ಷರಸ್ಥರು ಮತ್ತು ದುರ್ಬಲ ವರ್ಗಗಳ ಜನರ ಧ್ವನಿ ಹತ್ತಿಕ್ಕುವ ಕೆಲಸವಾಗುತ್ತಿದೆ. ಈವರೆಗೂ ಆಗಿರುವ ಪ್ರಕ್ರಿಯೆಯನ್ನು ನಾವು ಖಂಡಿಸುತ್ತೇವೆ. ಇದು ಕೇವಲ ಅಭಿಪ್ರಾಯದ ವಿಚಾರವಲ್ಲ. ಇದು ಮೂಲಭೂತ ಹಕ್ಕಿನ ವಿಚಾರ. ಇದು ಸಾಮಾನ್ಯ ಜನರ ಧ್ವನಿ.
ಚುನಾವಣಾ ಆಯೋಗದ ಹೆಸರಿನಲ್ಲಿ ವಿವಿಧ ರಾಜ್ಯಗಳ ಅಧಿಕಾರಿಗಳಿಗೆ ಒತ್ತಡ ಅಥವಾ ಬೆದರಿಕೆ ಹಾಕುವುದು ಸರಿಯಲ್ಲ. ಈ ವಿಚಾರವನ್ನು ಸಂಸತ್ತಿನಲ್ಲೂ ಸೇರಿದಂತೆ ದೊಡ್ಡ ಮಟ್ಟದಲ್ಲಿ ಚರ್ಚಿಸಬೇಕಾಗಿದೆ. ಪ್ರತಿಯೊಂದು ಮತಕ್ಕೂ ಅದರ ಹಕ್ಕನ್ನು ಖಚಿತಪಡಿಸುವ ನಿಟ್ಟಿನಲ್ಲಿ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಮತ್ತು ಮತದಾರರ ದತ್ತಾಂಶವನ್ನು ಮರುಪರಿಶೀಲಿಸಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.




