ಕರ್ನಾಟಕದಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗವು ತನ್ನ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ವಾರ್ಡ್ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡ ಬೆನ್ನಲ್ಲೇ, ಆಯೋಗವು ಚುನಾವಣಾ ಕಹಳೆ ಮೊಳಗಿಸಲು ಮುಂದಾಗಿದೆ.
ಚುನಾವಣಾ ಪೂರ್ವಭಾವಿ ಸಿದ್ಧತೆಗಳ ಭಾಗವಾಗಿ, ಆಯೋಗದ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸೆಪ್ಟೆಂಬರ್ 29 ರಂದು ಮಹತ್ವದ ವಿಡಿಯೋ ಸಂವಾದ ಸಭೆಯನ್ನು ಕರೆಯಲಾಗಿದೆ. ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳ ಅಪರ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿಶೇಷವಾಗಿ ಮತಗಟ್ಟೆಗಳ ಪರಿಶೀಲನೆ, ಅಗತ್ಯವಿರುವ ಒಟ್ಟು ಮತಪೆಟ್ಟಿಗೆಗಳ ಲೆಕ್ಕಾಚಾರ, ಕೊರತೆಯಿರುವ ಬಾಕ್ಸ್‌ಗಳ ಗುರುತಿಸುವಿಕೆ ಹಾಗೂ ಹಳೆಯ ಮತಪೆಟ್ಟಿಗೆಗಳ ದುರಸ್ತಿಗೆ ಆದ್ಯತೆ ನೀಡಲಾಗಿದೆ.
ಮತ್ತೊಂದೆಡೆ, ಆಡಳಿತರೂಢ ಕಾಂಗ್ರೆಸ್ ಪಕ್ಷ ಕೂಡ ಈ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದೇ ಹೇಳಬಹುದು. ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಿನಿಂದಲೇ ಸಜ್ಜಾಗುವಂತೆ ಶಾಸಕರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಅಷ್ಟೇ ಅಲ್ಲದೆ, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ 1 ಕೋಟಿ ರೂಪಾಯಿ ಅನುದಾನ ನೀಡುವ ಭರವಸೆಯೂ ವಲಯದಲ್ಲಿ ಚರ್ಚೆಯಲ್ಲಿದೆ.
ಸಧ್ಯದ ತಯಾರಿಗಳನ್ನು ಗಮನಿಸಿದರೆ, ಚುನಾವಣಾ ಆಯೋಗವು ಅಕ್ಟೋಬರ್ ಎರಡನೇ ವಾರದಲ್ಲಿ ಚುನಾವಣಾ ದಿನಾಂಕವನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ. ಡಿಸೆಂಬರ್ 2 ಅಥವಾ 3ನೇ ವಾರದಲ್ಲಿ ಮತದಾನ ನಡೆಯುವ ಸಂಭವವಿದ್ದು, ರಾಜ್ಯದ ಗ್ರಾಮೀಣ ರಾಜಕಾರಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.




