ಎಕರೆಗೆ ₹50 ಸಾವಿರ ಪರಿಹಾರ – ರೈತರ ಪರ ವಿಜಯೇಂದ್ರ ಮಾತು!

ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರು ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಉಡಾಫೆಯಾಗಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಠಿಣ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರಿಗೆ ಎಕರೆಗೆ ಕನಿಷ್ಠ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸುವುದರ ಜೊತೆಗೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಬರಗಾಲದ ಸಂದರ್ಭದಲ್ಲಿ ರೈತರಿಗೆ ದೊಡ್ಡ ಪ್ರಮಾಣದ ನೆರವು ನೀಡಲಾಗಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ರೈತರಿಗೆ ಕೇವಲ 2,500 ರೂಪಾಯಿ ಪರಿಹಾರ ನೀಡಿ ಕೈತೊಳೆದುಕೊಂಡಿದೆ ಎಂದು ವಿಜಯೇಂದ್ರ ಕಿಡಿಕಾರಿದರು. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸಾಲದ ಒತ್ತಡದಿಂದ ಮುಕ್ತಿ ಹಾಗೂ ಸಮರ್ಪಕ ತ್ರಿಫೇಸ್ ವಿದ್ಯುತ್ ಪೂರೈಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಇದೇ ವೇಳೆ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೈಜ ಆರ್ಥಿಕ ಸ್ಥಿತಿಯ ಕುರಿತು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದರು. ಬಡವರಿಗೆ ಸಿಗಬೇಕಾದ ವೃದ್ಧಾಪ್ಯ ವೇತನ ಹಾಗೂ ಪಿಂಚಣಿ ಹಣ ತಲುಪುತ್ತಿಲ್ಲ. ಆದರೆ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ರಾಜಕೀಯ ಕಾರ್ಯಕರ್ತರಿಗಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಡಾ. ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆದ ವೀಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಸರ್ಕಾರದ ಸೌಲಭ್ಯ ನೀಡುವಂತೆ ಸೂಚಿಸಲಾಗಿದೆ ಎಂಬ ಆರೋಪದ ಬಗ್ಗೆಯೂ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿರುವ ಬಿಜೆಪಿ, ಸರ್ಕಾರದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ.

About The Author