Dharwad News: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ನಾಮಪತ್ರ ಸಲ್ಲಿಸಿದ್ದಾರೆ.
ಧಾರವಾಡ ನಗರದ ಉಳವಿ ಚೆನ್ನಬಸವೇಶ್ವರ ವೃತ್ತದಿಂದ ನಾಮಪತ್ರ ಸಲ್ಲಿಕೆ ರ್ಯಾಲಿ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮಾಜಿ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಭಾಗಿಯಾಗಿದ್ದಾರೆ.
ಸತತ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಎಸ್.ವಿ. ಸಂಕನೂರು ನಾಮಪತ್ರ ಸಲ್ಲಿಸಿದ್ದಾರೆ. ಕಳೆದ 12 ವರ್ಷಗಳಿಂದ ಪಶ್ಚಿಮ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಂಕನೂರು, ಸದನದಲ್ಲಿ ಹಲವು ಬಾರಿ ಖಾಲಿ ಹುದ್ದೆಗಳ ವಿಚಾರ ಪ್ರಸ್ತಾಪಿಸಿದ್ದಾರೆ.
43 ಇಲಾಖೆಯಲ್ಲಿ 2.43 ಲಕ್ಷ ಹುದ್ದೆಗಳು ಖಾಲಿ ಇವೆ. ಹಲವು ಬಾರಿ ಒತ್ತಾಯಿಸಿದರೂ ನೇಮಕಾತಿಗೆ ಸರ್ಕಾರ ಮುಂದಾಗಿಲ್ಲ ಎಂದು ಆರೋಪಿಸಿರುವ ಸಂಕನೂರು, NPS ಸ್ಕೀಮ್ ರದ್ದುಪಡಿಸುವಂತೆ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ದೊಡ್ಡ ದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿಗೆ ಮಾತ್ರ ಕೈಗಾರಿಕೆಗಳು ಸೀಮಿತವಾಗಬಾರದು ಎಂದು ಆಗ್ರಹಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯಲ್ಲಿ 79 ಸಾವಿರ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿರುವ ಸಂಕನೂರು, ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಸೃಷ್ಟಿಸಿರುವುದು ಸೇರಿದಂತೆ ಹಲವು ಸಾಧನೆಗಳನ್ನು ಮುಂದಿಟ್ಟುಕೊಂಡು ಈ ಬಾರಿ ಮತಯಾಚನೆಗೆ ಮುಂದಾಗಿದ್ದಾರೆ.




