Hubli News: ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರದ ಸ್ಪಂದನೆ – ವಾರದೊಳಗೆ ಜಂಟಿ ಸಮಿತಿ ರಚನೆ

Hubli News: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಬ್ಬಿನ ಸಕ್ಕರೆ ಇಳುವರಿ, ತೂಕ ಕಡಿತ ಹಾಗೂ ಪಾವತಿ ಸಂಬಂಧಿತ ವಿವಾದಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಒಂದು ವಾರದೊಳಗೆ ಉನ್ನತ ಮಟ್ಟದ ಜಂಟಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ.

ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ. ರೈತರು, ವಿಜ್ಞಾನಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವ ಭರವಸೆ ನೀಡಲಾಗಿದೆ. ಹಾಗಾದರೆ, ಸಭೆಯಲ್ಲಿ ಕೈಗೊಂಡ ನಿರ್ಧಾರಗಳೇನು..? ರೈತರಿಗೆ ನ್ಯಾಯ ಒದಗಿಸಲು ಕೇಂದ್ರದ ಮುಂದಿನ ನಡೆ ಏನು..?

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನವದೆಹಲಿಯಲ್ಲಿ ಸೋಮವಾರ ಸಂಜೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಬ್ಬಿನ ಸಕ್ಕರೆ ಇಳುವರಿ ಲೆಕ್ಕಾಚಾರದಲ್ಲಿನ ವ್ಯತ್ಯಾಸ, ತೂಕ ಕಡಿತ, ಪಾವತಿ ಸಂಬಂಧಿತ ವಿವಾದಗಳು ಹಾಗೂ ಸಕ್ಕರೆ ಕಾರ್ಖಾನೆಗಳ ಕಾರ್ಯವೈಖರಿ ಕುರಿತು ರೈತರು ತಮ್ಮ ಅಹವಾಲುಗಳನ್ನು ಮಂಡಿಸಿದರು. ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಒಂದು ವಾರದೊಳಗೆ ಉನ್ನತ ಮಟ್ಟದ ಜಂಟಿ ಸಮಿತಿ ರಚಿಸುವುದಾಗಿ ಭರವಸೆ ನೀಡಿದರು.

ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ರೈತ ಸಂಘಟನೆಗಳ ಮುಖಂಡರು, ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ಕೃಷಿ ವಿಜ್ಞಾನಿಗಳು ಇರಲಿದ್ದಾರೆ. ಕಬ್ಬಿನ ಸಕ್ಕರೆ ಇಳುವರಿಯನ್ನು ಅಳೆಯುವ ವೈಜ್ಞಾನಿಕ ಮಾನದಂಡಗಳು, ತೂಕದ ನಿಖರತೆ, ಪ್ರಯೋಗಾಲಯ ಪರೀಕ್ಷೆ ಮತ್ತು ಕಟಾವಿಗೆ ಸಂಬಂಧಿಸಿದ ತಾಂತ್ರಿಕ ಅಂಶಗಳನ್ನು ಸಮಿತಿ ಕೂಲಂಕಷವಾಗಿ ಪರಿಶೀಲಿಸಿ, ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಲಿದೆ.

ಸಕ್ಕರೆ ಇಳುವರಿ ಅಂಕಿ-ಅಂಶಗಳಲ್ಲಿ ವ್ಯತ್ಯಾಸವಾಗುತ್ತಿದೆ ಹಾಗೂ ನೈಜ ಇಳುವರಿಯನ್ನು ಮರೆಮಾಚಲಾಗುತ್ತಿದೆ ಎಂಬ ರೈತರ ಆರೋಪಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ರೈತರಿಗೆ ಅನ್ಯಾಯವಾಗದಂತೆ ಪಾರದರ್ಶಕ ವ್ಯವಸ್ಥೆ ರೂಪಿಸುವುದು ಮತ್ತು ಸಕ್ಕರೆ ಕಾರ್ಖಾನೆಗಳಲ್ಲಿ ವೈಜ್ಞಾನಿಕ ವಿಧಾನಗಳನ್ನು ಅಳವಡಿಸುವುದು ಅಗತ್ಯ ಎಂದು ಸಚಿವರು ತಿಳಿಸಿದ್ದಾರೆ.

ಇದರ ಜೊತೆಗೆ ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆಗೆ ಸಂಬಂಧಿಸಿದ FRP, ರಾಜ್ಯ ಸಲಹಾ ಬೆಲೆ SAP, ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹಾಗೂ ಎಥೆನಾಲ್ ಉತ್ಪಾದನೆ ಬಗ್ಗೆಯೂ ಚರ್ಚಿಸಲಾಯಿತು. ರೈತರ ಆದಾಯ ವೃದ್ಧಿ ಮತ್ತು ಅವರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ ಸಹಕಾರವೂ ಅಗತ್ಯ ಎಂದು ತಿಳಿಸಲಾಗಿದೆ. ಸಭೆಯಲ್ಲಿ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ, ಕೃಷಿ ಸಚಿವ ನರೇಂದ್ರ ಸ್ವಾಮಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ, ರೈತ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಒಟ್ಟಿನಲ್ಲಿ, ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಒಂದು ವಾರದೊಳಗೆ ಜಂಟಿ ಸಮಿತಿ ರಚಿಸುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ. ಈಗ ಈ ಸಮಿತಿ ನಿಗದಿತ ಸಮಯದಲ್ಲಿ ರಚನೆಯಾಗಿ, ರೈತರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ದೊರಕಿಸಿಕೊಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

About The Author