Hubli News: ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು: ಸಿಎಂ ಡಿ.ಕೆ.ಶಿವಕುಮಾರ್

Hubli News: ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣ.. ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪದವೀಧರರೊಂದಿಗಿನ ಸಂವಾದ ಸಭೆ.. ಈ ಸಭೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್, ಉದ್ಯೋಗ, ಪರೀಕ್ಷಾ ವ್ಯವಸ್ಥೆ ಹಾಗೂ ರಾಜಕೀಯ ವಿಚಾರಗಳ ಕುರಿತು ಮಾತನಾಡಿದರು..

ಕೆಪಿಎಸ್‌ಸಿ ಹಗರಣ ಬಿಜೆಪಿಯ ಕೂಸು ಎಂದು ಆರೋಪಿಸಿದ ಸಿಎಂ, ವಿದ್ಯಾರ್ಥಿಗಳು ಮತ್ತು ಪದವೀಧರರಿಗೆ ಅರ್ಹತೆಯ ಆಧಾರದ ಮೇಲೆ ಉದ್ಯೋಗ ಸಿಗಬೇಕು.. ಪರೀಕ್ಷಾ ವ್ಯವಸ್ಥೆಯಲ್ಲಿ ಹಣದ ವ್ಯವಹಾರ, ಒತ್ತಡ ಹಾಗೂ ಪ್ರಭಾವಕ್ಕೆ ಅವಕಾಶ ಇರಬಾರದು.. ನೀಟ್, ಎಸ್‌ಐ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳ ಬಗ್ಗೆ ಮಾತನಾಡಿದ ಅವರು, ಕೆಪಿಎಸ್‌ಸಿ ಪ್ರಕರಣದಲ್ಲಿ ತನಿಖೆಯ ಮೂಲಕ ಸತ್ಯಾಂಶ ಹೊರಬರಬೇಕು.. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆಗೆ ಸರ್ಕಾರ ಸಹಕಾರ ನೀಡಿದೆ ಎಂದರು..

ಇನ್ನು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್, ಅಭ್ಯರ್ಥಿ ಆಯ್ಕೆಯಲ್ಲೇ ಬಿಜೆಪಿಗೆ ಗೊಂದಲ ಉಂಟಾಗಿತ್ತು ಎಂದು ಟೀಕಿಸಿದರು.. ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದಂತೆ ಕಾಣುತ್ತಿಲ್ಲ ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರಿಗೆ ಮತ ನೀಡುವಂತೆ ಪದವೀಧರರಲ್ಲಿ ಮನವಿ ಮಾಡಿದರು..

ಇದೇ ವೇಳೆ ನಿರುದ್ಯೋಗ ಸಮಸ್ಯೆ ಬಗ್ಗೆಯೂ ಪ್ರಸ್ತಾಪಿಸಿದ ಸಿಎಂ, ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಆದ್ಯತೆ ಎಂದರು.. ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ ರೂಪಿಸುವ ಮೂಲಕ ಉದ್ಯೋಗ ನೀಡುವ ಸಂಸ್ಥೆಗಳು ಹಾಗೂ ಉದ್ಯೋಗ ಹುಡುಕುವ ಅಭ್ಯರ್ಥಿಗಳನ್ನು ಒಂದೇ ವೇದಿಕೆಗೆ ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು..

ಬೆಂಗಳೂರು ಹೊರಗಿನ ನಗರಗಳಲ್ಲೂ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುತ್ತಿದೆ.. ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆ ಹಾಗೂ ಸಂಸ್ಥೆಗಳು ಸ್ಥಾಪನೆಯಾಗಬೇಕು.. ಸ್ಥಳೀಯ ಯುವಜನರಿಗೆ ಉದ್ಯೋಗ ದೊರೆಯಬೇಕು ಎಂಬ ಉದ್ದೇಶದಿಂದ ‘ಬಿಯಾಂಡ್ ಬೆಂಗಳೂರು’ ಯೋಜನೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು..

ಶಿಕ್ಷಕರ ಗೌರವದ ವಿಚಾರವಾಗಿ ಮಾತನಾಡಿದ ಸಿಎಂ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಗೌರವ ನೀಡುವ ಉದ್ದೇಶದಿಂದ ಟಿಆರ್ ಎಂಬ ವೃತ್ತಿ ಪದನಾಮ ಬಳಕೆಗೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಹೇಳಿದರು..

ಇನ್ನು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಎಸ್‌ಐಆರ್ ವಿಚಾರ ಪ್ರಸ್ತಾಪಿಸಿದ ಡಿ.ಕೆ. ಶಿವಕುಮಾರ್, ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನಗಳ ಬಗ್ಗೆ ಪದವೀಧರರು ಎಚ್ಚರಿಕೆಯಿಂದ ಇರಬೇಕು ಎಂದರು.. ಮತದಾನದ ಹಕ್ಕು ಪ್ರತಿಯೊಬ್ಬರಿಗೂ ದೊರೆಯಬೇಕು.. ಮತದಾರರ ಹಕ್ಕುಗಳ ರಕ್ಷಣೆಗಾಗಿ ಕಾಂಗ್ರೆಸ್ ಹೋರಾಟ ನಡೆಸಿದೆ ಎಂದು ತಿಳಿಸಿದರು..

ಒಟ್ಟಿನಲ್ಲಿ, ಪದವೀಧರರ ಸಂವಾದ ಸಭೆಯಲ್ಲಿ ಉದ್ಯೋಗ ಸೃಷ್ಟಿ, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಹಾಗೂ ಮತದಾರರ ಹಕ್ಕುಗಳ ವಿಚಾರಗಳನ್ನು ಮುಂದಿಟ್ಟ ಸಿಎಂ ಡಿ.ಕೆ. ಶಿವಕುಮಾರ್, ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು..

About The Author