SIR ಕುರಿತು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ!: ಸಚಿವ ಸತೀಶ್ ಜಾರಕಿಹೊಳಿ

Political News: ಎಸ್‌ಐಆರ್ ಕುರಿತಾಗಿ ಸಚಿವ ಸತೀಶ್ ಜಾರಕಿಹ“ಳಿ ಅವರು, ನಮ್ಮ ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿ ನಡೆದಿದೆ ಎಂದು ಹೇಳಿಕೆ ನೀಡಿದ್ದರು.

ಈ ಬಗ್ಗೆ ಮಾಧ್ಯಮಗಳಲ್ಲೂ ಸುದ್ದಿ ಬಂದಿದ್ದು, ಬಿಜೆಪಿ- ಜೆಡಿಎಸ್ ನಾಯಕರು ಕೂಡ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದರು. ಆದರೆ ಇಂದು ಎಕ್ಸ್ ಖಾತೆಯಲ್ಲಿ ಸತೀಶ್ ಸ್ಪಷ್ಟನೆ ನೀಡಿದ್ದಾರೆ.

SIR ಕುರಿತು ಮಾಧ್ಯಮಗಳ ಮುಂದೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಫಾರಂ–7 ಮೂಲಕ ಕಾಂಗ್ರೆಸ್ ಬೆಂಬಲಿಗ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಬಿಜೆಪಿಯ ಷಡ್ಯಂತ್ರವನ್ನು ನಮ್ಮ ರಾಷ್ಟ್ರ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ಹೋರಾಟ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ವಿಫಲಗೊಳಿಸಲಾಗಿದೆ ಎಂಬುದು ನನ್ನ ಹೇಳಿಕೆಯ ಉದ್ದೇಶವಾಗಿತ್ತು. ಆದರೆ, SIR ಪ್ರಕ್ರಿಯೆ ಸರಿಯಾಗಿದೆ ಎಂಬ ಅರ್ಥದಲ್ಲಿ ನಾನು ಹೇಳಿಕೆ ನೀಡಿಲ್ಲ ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಫಾರಂ–7 ಮೂಲಕ ಅರ್ಹ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನವನ್ನು ನಾವು ವಿಫಲಗೊಳಿಸಿದ್ದು, ಈ ಹೋರಾಟಕ್ಕೆ ನಮ್ಮ ಬೆಳಗಾವಿ ಜಿಲ್ಲೆಯಿಂದಲೇ ಚಾಲನೆ ನೀಡಿ ಯಶಸ್ವಿಯಾಗಿ ಎದುರಿಸಿದ್ದೇವೆ.

ಅರ್ಹ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನದ ವಿರುದ್ಧ ನನ್ನ ನಿಲುವು ಮೊದಲಿನಿಂದಲೂ ದೃಢವಾಗಿದೆ. ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವ ಪ್ರಯತ್ನಗಳನ್ನು ನಾನು ಬಲವಾಗಿ ವಿರೋಧಿಸುತ್ತೇನೆ. ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರೊಂದಿಗೆ ದೃಢವಾಗಿ ನಿಲ್ಲುತ್ತೇನೆ.

ನನ್ನ ಹೇಳಿಕೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸದೆ, ಅದರ ನೈಜ ಆಶಯವನ್ನು ಗ್ರಹಿಸಬೇಕೆಂದು ಸ್ಪಷ್ಟಪಡಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹ“ಳಿ ಹೇಳಿದ್ದಾರೆ.

About The Author