Dharwad News: ಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ – ಸಚಿವ ಸಂತೋಷ್ ಲಾಡ್

Dharwad News: ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ನೆರವೇರಿಸಿ, ಕನ್ನಡ ಭಾಷೆ ಮತ್ತು ನಾಡು ಕಟ್ಟುವಲ್ಲಿ ಧಾರವಾಡದ ಮಹನೀಯರ ಕೊಡುಗೆಯನ್ನು ಸ್ಮರಿಸಿದರು. ಇದೇ ವೇಳೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ. ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲೂ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ನೆರವೇರಿಸಿ, ವಿವಿಧ ಪೊಲೀಸ್ ಹಾಗೂ ಇಲಾಖೆಗಳ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.

ಬಳಿಕ ಮಾತನಾಡಿದ ಸಚಿವರು, ಕನ್ನಡ ಕಟ್ಟುವಲ್ಲಿ ಆಲೂರು ವೆಂಕಟರಾಯರು, ಹುಯಿಲಗೋಳ ನಾರಾಯಣರಾಯರು, ಪಾಟೀಲ ಪುಟ್ಟಪ್ಪ ಸೇರಿದಂತೆ ಧಾರವಾಡದ ಅನೇಕ ಧುರೀಣರ ಕೊಡುಗೆ ಅಪಾರ ಎಂದು ಸ್ಮರಿಸಿದರು. ಪಂಪ, ವಚನಕಾರರು, ದಾಸರು, ಸರ್ವಜ್ಞ, ಕುವೆಂಪು ಸೇರಿದಂತೆ ಮಹನೀಯರ ಸಾಹಿತ್ಯ ಮತ್ತು ಚಿಂತನೆಗಳು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಸಾರುತ್ತವೆ. ಕನ್ನಡವನ್ನು ಮನೆ, ವ್ಯವಹಾರ ಹಾಗೂ ದೈನಂದಿನ ಬದುಕಿನಲ್ಲಿ ಹೆಚ್ಚು ಬಳಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ವಿವರಗಳನ್ನು ಸಚಿವರು ಹಂಚಿಕೊಂಡರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಸಾವಿರಾರು ಕುಟುಂಬಗಳು ಮತ್ತು ಯುವಜನರಿಗೆ ನೆರವು ಒದಗಿಸಲಾಗಿದೆ ಎಂದು ತಿಳಿಸಿದರು. ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರವನ್ನು ರೈತರ ಖಾತೆಗಳಿಗೆ ಜಮೆ ಮಾಡಿರುವ ಬಗ್ಗೆಯೂ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಪರಿಚಯ ಮಾಡಿಕೊಡುವ ಉದ್ದೇಶದ ಗ್ರಾಮಾನುಭವ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪಥಸಂಚಲನದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಕೆ. ವೆಂಕಟರಮಣ ಮತ್ತು ಕೆ. ವಿಜಯಲಕ್ಷ್ಮೀ ಪಾಟೀಲ ಅವರನ್ನು ಸಚಿವರು ಅಭಿನಂದಿಸಿದರು.

ಕಾರ್ಯಕ್ರಮದ ಬಳಿಕ ಸಚಿವ ಸಂತೋಷ್ ಲಾಡ್ ಅವರ ವಾಹನವನ್ನು ಜಿಲ್ಲಾಧಿಕಾರಿ ಆರ್. ಸ್ನೇಹಲ್ ಸ್ವತಃ ಚಾಲನೆ ಮಾಡಿದ್ದು ವಿಶೇಷ ಗಮನ ಸೆಳೆಯಿತು. ವಿದ್ಯಾರ್ಥಿಗಳು ಸಚಿವರೊಂದಿಗೆ ಸಂವಾದ ನಡೆಸಿ, ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಅಭಿಮಾನವನ್ನು ಸಾರುವ ಮೂಲಕ ಧಾರವಾಡದಲ್ಲಿ ರಾಜ್ಯೋತ್ಸವ ಆಚರಣೆ ಸಂಪನ್ನವಾಯಿತು.

About The Author